ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ದ: ವಿಶೇಷ ಸಚಿವ ಸಂಪುಟ ಸಭೆ ಮಾರ್ಚ್ 27ಕ್ಕೆ
ಬೆಂಗಳೂರು, ಮಾರ್ಚ್ 10: ನೇಮಕಾತಿ ಪ್ರಕ್ರಿಯೆಯಲ್ಲಿ ಒಳಮೀಸಲಾತಿ ಜಾರಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು. ಒಳಮೀಸಲಾತಿ ವಿಷಯದಲ್ಲಿ ಮಾರ್ಚ್ 27ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಿತು. ನೇಮಕಾತಿ ಪ್ರಕ್ರಿಯೆಯಲ್ಲಿ ಒಳಮೀಸಲಾತಿಯನ್ನು ಅನುಷ್ಠಾನಗೊಳಿಸಿ ನ್ಯಾಯಯುತ ಅವಕಾಶಗಳನ್ನು ಒದಗಿಸಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ದವಾಗಿದ್ದು, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ನೂರೊಂದು ಜಾತಿಗಳಿಗೂ ಸಮಾನ ನ್ಯಾಯ ಒದಗಿಸುವುದು ಸರ್ಕಾರದ ಉದ್ದೇಶ ಎಂದು ತಿಳಿಸಿದ್ದಾರೆ.
ಒಳಮೀಸಲಾತಿ ವಿಚಾರವಾಗಿ ಅನಗತ್ಯ ಹೇಳಿಕೆಗಳು ಹಾಗೂ ಹೋರಾಟಗಳನ್ನು ನಡೆಸಬಾರದು ಎಂದು ಸಂಘಟನೆಗಳಿಗೆ ಮುನಿಯಪ್ಪ ಮನವಿ ಮಾಡಿದರು.
ವಿಧಾನಸಭೆ ಅಧಿವೇಶನ ಮುಗಿದ ನಂತರ ಈ ತಿಂಗಳ 27ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದು, ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಷಯದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮುನಿಯಪ್ಪ ಹೇಳಿದರು.
ಈ ವೇಳೆ ನಿಯೋಗದಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಶಾಸಕರಾದ ಶ್ರೀನಿವಾಸ್, ಬಸವಂತಪ್ಪ, ಸುದಾಮದಾಸ್, ತಿಮ್ಮಯ್ಯ ಹಾಗೂ ವಸಂತ ಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.