ವಿಜಯಪುರ ಜಿಲ್ಲೆಯ ತಿಕೋಟಾದ ಎ.ಬಿ. ಜತ್ತಿ ಶಾಲೆಯಲ್ಲಿ ಮಕ್ಕಳ ದಿನದ ವಿಜ್ಞಾನ ಜಾತ್ರೆಯಲ್ಲಿ ದೀಪ ಬೆಳಗಿದ ದೃಶ್ಯ. ಫೋಟೊ: ಸಚಿವ ಎಂ.ಬಿ. ಪಾಟೀಲ ಅವರ ಮಾಧ್ಯಮ ತಂಡ
ವಿಜಯಪುರ: ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರೊಂದಿಗೆ ವಿಜ್ಞಾನದ ವಿವಿಧ ಪರಿಕಲ್ಪನೆಗಳನ್ನು ಪ್ರಾಯೋಗಿಕವಾಗಿ ಅರಿತುಕೊಳ್ಳಲು ವಿಜ್ಞಾನಜಾತ್ರೆಗಳು ಉತ್ತಮ ವೇದಿಕೆ; ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ, ಸೃಜನಶೀಲತೆ ಹಾಗೂ ವೈಜ್ಞಾನಿಕ ಚಿಂತನೆ ಬೆಳೆಸಲು ಸಹಕಾರಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದರು.
ಮಕ್ಕಳ ದಿನಾಚರಣೆ ಅಂಗವಾಗಿ ತಿಕೋಟಾದ ಎ.ಬಿ. ಜತ್ತಿ ಶಾಲೆ ಆವರಣದಲ್ಲಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಬಿ.ಎಲ್.ಡಿ.ಇ ಸಂಸ್ಥೆ ಹಾಗೂ ಅಗಸ್ತ್ಯ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ವಿಜ್ಞಾನಜಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಸುಮಾರು ₹4,500 ಕೋಟಿ ವೆಚ್ಚದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಎಲ್ಕೆಜಿಯಿಂದ ಪಿಯುಸಿವರೆಗೆ 14 ವರ್ಷಗಳ ಶಿಕ್ಷಣವನ್ನು ಒಂದೇ ಸೂರಿನಡಿ ಒದಗಿಸುವುದರ ಜತೆಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಬಂಗಾರಪ್ಪ ತಿಳಿಸಿದರು.
ಸರ್ಕಾರಿ ಶಾಲೆಗಳ ಮಕ್ಕಳ ಪೌಷ್ಟಿಕತೆಗೂ ಸರ್ಕಾರ ಆದ್ಯತೆ ನೀಡಿದೆ. ರಾಜ್ಯದ ಸುಮಾರು 45 ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ಹಾಗೂ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ವಿತರಿಸಲಾಗುತ್ತಿದೆ; ₹1,991 ಕೋಟಿ ವೆಚ್ಚದ ಈ ಕಾರ್ಯಕ್ರಮಕ್ಕೆ ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ, ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ, ಮೂರನೇ ತರಗತಿಯಿಂದ ಕೃತಕ ಬುದ್ಧಿಮತ್ತೆ ಪರಿಚಯ ಹಾಗೂ ಆರನೇ ತರಗತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಯೋಜಿಸಲಾಗಿದೆ; ಆಧುನಿಕ ತಂತ್ರಜ್ಞಾನದ ಜ್ಞಾನವನ್ನು ಬಾಲ್ಯದಿಂದಲೇ ಪರಿಚಯಿಸುವ ಮೂಲಕ ಭವಿಷ್ಯದ ಸವಾಲುಗಳನ್ನು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಅರ್ಹ ಹಾಗೂ ಅನುಭವಿ ಶಿಕ್ಷಕರಿದ್ದು, ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು, ಪೋಷಕರನ್ನು ಗೌರವಿಸಿ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ಸಲಹೆ ನೀಡಿದರು. ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರನ್ನು ಸ್ಮರಿಸಿದ ಅವರು, ಬಡ ಮಕ್ಕಳನ್ನು ಶಾಲೆಗೆ ಕರೆತರಲು ಅವರು ಜಾರಿಗೆ ತಂದಿದ್ದ ಒಂದು ರೂಪಾಯಿ ಪ್ರೋತ್ಸಾಹಧನ ಯೋಜನೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರೇರಣೆಯಾಯಿತು ಎಂದರು. ರಾಜ್ಯದ ಎಲ್ಲ ಜಿಲ್ಲೆಗಳ ಕೈಗಾರಿಕೋದ್ಯಮಿಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ, ಬಡ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು. ಶಾಲೆಗಳ ಅಭಿವೃದ್ಧಿಗೆ ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಹಾಗೂ ದಾನಿಗಳ ಸಹಕಾರ ಪಡೆಯಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳಿಗೂ ಆಟಿಕೆ ಮತ್ತು ಆಟದ ಉಪಕರಣಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿಗಳು ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ವಿಜ್ಞಾನಿಗಳು ಹಾಗೂ ತಂತ್ರಜ್ಞಾನಿಗಳಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಹೇಳಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಚಿವರು ವಿಶೇಷ ಕಾಳಜಿ ವಹಿಸುತ್ತಿರುವುದನ್ನು ಶ್ಲಾಘಿಸಿದರು. ವಿಜಯಪುರ ಜಿಲ್ಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಗುರಿ ಹೊಂದಬೇಕು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.
ವಿಜ್ಞಾನ ಜಾತ್ರೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮಾದರಿಗಳನ್ನು ಪ್ರದರ್ಶಿಸಿದರು ಎಂದು ಸಚಿವರ ಮಾಧ್ಯಮ ತಂಡ ಹಂಚಿಕೊಂಡ ವರದಿ ತಿಳಿಸಿದೆ. ಹೀಟ್ ರಿಕವರಿ ಸಿಸ್ಟಮ್, ಮಣ್ಣಿನ ತೇವಾಂಶ ಪತ್ತೆಹಚ್ಚುವ ಯಂತ್ರ, ವಿದ್ಯುತ್ ಟ್ರ್ಯಾಕ್ಟರ್, ಸ್ಮಾರ್ಟ್ ನೀರಾವರಿ, ಮಳೆನೀರು ಸಂಗ್ರಹ, ಸ್ವಯಂಚಾಲಿತ ಅಗ್ನಿಶಾಮಕ ಯಂತ್ರ ಹಾಗೂ ಭೂಕುಸಿತ ಮುನ್ನೆಚ್ಚರಿಕೆ ವ್ಯವಸ್ಥೆ ಅವುಗಳಲ್ಲಿ ಸೇರಿದ್ದವು.
ನಾಗಠಾಣ ಶಾಸಕ ವಿಠ್ಠಲ ಕಟಕಧೊಂಡ, ಶಾಲಾ ಶಿಕ್ಷಣ ಇಲಾಖೆಯ ಧಾರವಾಡದ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಂಜುನಾಥ ಗುಳೇದಗುಡ್ಡ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎ.ಬಿ. ಜತ್ತಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ಟಿಬಿಎಲ್ನ ಹಿಂದಿನ ವರದಿ:
