ಶನಿವಾರ ಸಚಿವ ಕೆ.ಎಚ್. ಮುನಿಯಪ್ಪ ಭಾಗವಹಿಸಿದ್ದ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಸೇರಿದ್ದ ಜನಸ್ತೋಮ. ಫೋಟೊ: ಸಚಿವ ಕೆ.ಎಚ್. ಮುನಿಯಪ್ಪ ಮಾಧ್ಯಮ ಗುಂಪು
ಹೊಸಕೋಟೆ: ಜನಸಾಮಾನ್ಯರು, ಬಡವರು ಮತ್ತು ರೈತರ ಸಮಸ್ಯೆ, ಅಹವಾಲು ಆಲಿಸಿ ಅವರಿಗೆ ತ್ವರಿತ ಪರಿಹಾರ ಒದಗಿಸುವುದು ಸರ್ಕಾರದ ಉದ್ದೇಶ ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಶನಿವಾರ ಹೇಳಿದರು.
ಹೊಸಕೋಟೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಹೊಸಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ದೊಡ್ಡಹುಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಹೋಬಳಿ ಮಟ್ಟದ ‘ಪ್ರಜಾ ಸೇವಾ’ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದಾರೆ ಎಂದ ಮುನಿಯಪ್ಪ, ರಾಜಕೀಯ ಎನ್ನುವುದು ಜನರ ಸೇವೆಗಾಗಿ ಎಂಬ ಗಾಂಧೀಜಿಯವರ ಆಶಯದಂತೆ ಜನರ ಭಾವನೆ, ಕಷ್ಟ ಮತ್ತು ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಬೇಕು; ಜನರ ಮತ ಪಡೆಯುವುದು ಎಷ್ಟು ಮುಖ್ಯವೋ, ಅವರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಆಲಿಸುವುದೂ ಅಷ್ಟೇ ಮುಖ್ಯ ಎಂದರು.
ಸಾಮಾನ್ಯ ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆಯುವುದನ್ನು ತಪ್ಪಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಂದೇ ವೇದಿಕೆಗೆ ತಂದು ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಈ ಹಿಂದಿನ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಸುಮಾರು 3,600 ಅರ್ಜಿಗಳು ಸ್ವೀಕೃತವಾಗಿದ್ದು, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ 2,900 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದ ಅವರು, ಆಡಳಿತ ವ್ಯವಸ್ಥೆಯೇ ಜನರ ಮನೆ ಬಾಗಿಲಿಗೆ ತೆರಳಿದಾಗ ತಮ್ಮ ಚುನಾಯಿತ ಪ್ರತಿನಿಧಿಗಳು ನೆರವಿಗೆ ಬರುತ್ತಿದ್ದಾರೆ ಎಂಬ ವಿಶ್ವಾಸ ಜನರಲ್ಲಿ ಮೂಡುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಮಾತನಾಡಿ, ಮುಖ್ಯಮಂತ್ರಿಗಳ ಆಶಯದಂತೆ ಎಲ್ಲ ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ; ಸಾರ್ವಜನಿಕರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸುವರು ಎಂದರು. ಶನಿವಾರದ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 499 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಎಲ್ಲವನ್ನೂ ಸಂಬಂಧಪಟ್ಟ ಇಲಾಖೆಗಳ ಪರಿಶೀಲನೆಗೆ ಕಳುಹಿಸಲಾಗಿದೆ; ನಿಯಮಾನುಸಾರ ಶೀಘ್ರವೇ ಎಲ್ಲರಿಗೂ ನ್ಯಾಯ ಒದಗಿಸಲಾಗುವುದು ಎಂದು ಹೇಳಿದರು.
