
ಬೆಂಗಳೂರು:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂಬರುವ ದಿನಗಳಲ್ಲಿ ಎಲ್ಲಾ ಹಿಂದುಳಿದ ವರ್ಗಗಳಿಗೆ ಅನುಕೂಲವಾಗುವಂತಹ ಹೊಸ ದೃಷ್ಟಿಕೋನದ ಹೊಸ ಯೋಜನೆಗಳನ್ನು ರೂಪಿಸಬೇಕು, ಕೆಲವೇ ಸಮುದಾಯಗಳಿಗೆ ಸೀಮಿತವಾಗದೆ ಎಲ್ಲಾ ಸಮುದಾಯದ ಹಿಂದುಳಿದ ಜನರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳು ಇಲಾಖಾವಾರು ಆಯವ್ಯಯ ಪೂರ್ವಭಾವಿ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಅವರು ಇಂದು ತಮ್ಮ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗು ಅದರ ವ್ಯಾಪ್ತಿಗೆ ಬರುವ ವಿವಿಧ ನಿಗಮ ,ಮಂಡಳಿಗಳ ಸಭೆ ನಡೆಸಿದರು.
ಸ್ವಯಂ ಉದ್ಯೋಗ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ,ಇದರಿಂದ ನಿರುದ್ಯೋಗಿ ಯುವಜನರಿಗೆ ಜೀವನೋಪಾಯಕ್ಕೆ ದಾರಿಯಾಗುತ್ತದೆ ಎಂದು ಅವರು ಸೂಚಿಸಿದರು.
ಬಡಜನರು,ರೈತರು ಹಾಗೂ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವ ಹೊಸ ದೃಷ್ಟಿಯ ಯೋಜನೆಗಳನ್ನು ರೂಪಿಸಿ ಎಂದು ಅವರು ತಿಳಿಸಿದರು.ಯಾವುದೇ ಯೋಜನೆಗಳ ಅನುಷ್ಠಾನ ಪರಿಣಾಮಕಾರಿಯಾಗಿಸಲು ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು, ಇಲಾಖೆಯ ಯೋಜನೆಗಳ ಲಾಭ ಕಟ್ಟ ಕಡೆಯ ಫಲಾನುವಿಗಳಿಗೆ ತಲುಪಬೇಕಾದರೆ ಆ ಯೋಜನೆಗಳಿಗೆ ವ್ಯಾಪಕ ಪ್ರಚಾರ ನೀಡುವುದು ಅಗತ್ಯವಿದೆ.ಆ ಕುರಿತು ಗಮನ ಹರಿಸಿ ಎಂದು ಅವರು ಸೂಚಿಸಿದರು.
ಹಿಂದುಳಿದ ವರ್ಗಗಳ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಅನುದಾನ ಹೆಚ್ಚಿಸಲು ತಾವು ಮಾನ್ಯ ಮುಖ್ಯಮಂತ್ರಿಗಳನ್ನು ಕೋರುವುದಾಗಿ ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಇಲಾಖೆ ಆಯುಕ್ತ ಕೆ ಎ ದಯಾನಂದ ಹಾಗೂ ವಿವಿಧ ನಿಗಮ, ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.