ನೋಂದಣಿ ಪ್ರಕ್ರಿಯೆ ಉಚಿತ
ಬೆಂಗಳೂರು:
ರಾಜ್ಯ ಸರ್ಕಾರದ ಬಹು ನಿರೀಕ್ಷಿತ ‘ಗೃಹ ಲಕ್ಷ್ಮಿ’ ಯೋಜನೆಗೆ ಜುಲೈ 19ರಂದು (ಬುಧವಾರ) ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡುವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು.
ಒಟ್ಟಾರೆ 1.28 ಕೋಟಿ ಮಹಿಳೆಯರು ಈ ಯೋಜನೆಗೆ ಅರ್ಹರಿದ್ದಾರೆ. ನೋಂದಣಿ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕವೇ ಇದರ ಸ್ಪಷ್ಟ ಚಿತ್ರಣ ಸಿಗಲಿದ್ದು, ಆಗಸ್ಟ್ ತಿಂಗಳಿನಿಂದಲೇ ಅವರ ಖಾತೆಗೆ ಹಣ ಜಮಾ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಗ್ರಾಮಾಂತರ ಪ್ರದೇಶದವರಿಗೆ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶವಿದ್ದು, ನಗರ ಪ್ರದೇಶದವರು ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ಮಾಡಿಸಲು ಅವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ಜೊತೆಗೆ ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕ ಪ್ರಜಾಪ್ರತಿನಿಧಿಗಳ ಮೂಲಕ ಸಹ ನೋಂದಣಿ ಮಾಡಿಸಿಕೊಳ್ಳಬಹುದು. ಪ್ರಜಾಪ್ರತಿನಿಧಿಗಳು ಮನೆಮನೆಗೆ ಭೇಟಿ ನೀಡುವರು ಎಂದು ತಿಳಿಸಿದರು.
ಫೋನ್ ಮೂಲಕ ಮಾಹಿತಿ
ಪ್ರತಿ ಫಲಾನುಭವಿ ನೊಂದಣಿಗೆ ನಿಗದಿಪಡಿಸಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು1902 ಕರೆ ಮಾಡಿ ತಿಳಿದುಕೊಳ್ಳಬಹುದು. ಜೊತೆಗೆ 8147500500ಗೆ ಎಸ್‌ಎಂಎಸ್ ಅಥವಾ ವಾಟ್ಸ್ ಆಪ್ ಮೂಲಕ ಸಂದೇಶ ಕಳುಹಿಸಿ ವಿವರ ಪಡೆದುಕೊಳ್ಳಬಹುದು. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಕ್ಕೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ದಿನಗಳಲ್ಲಿ ಸಂಜೆ 5ರಿಂದ 7ರ ಅವಧಿಯಲ್ಲಿ ಹೋಗಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದರು.
ಯೋಜನೆಗೆ ಬೇಕಾದ ದಾಖಲೆಗಳು
ಯೋಜನೆಯಡಿ ನೋಂದಾಯಿಸಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ನೀಡಬೇಕು. ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲೆ ಆ ಬ್ಯಾಂಕ್ ಖಾತೆಯ ಪಾಸ್ ಬುಕ್ ನೀಡಬೇಕು.
ನಿಗದಿತ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಂಡಾಗ ಮಂಜೂರಾತಿ ಪತ್ರವನ್ನು ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ತದನಂತರ ಮನೆಗೆ ತಲುಪಲಿದೆ ಎಂದು ಸಚಿವರು ವಿವರಿಸಿದರು.
ಇಲಾಖೆಯ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಇದ್ದರು.