ಬೆಂಗಳೂರು;- ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬೆಂಗಳೂರಿನ ಹೈಕೋರ್ಟ್ ಆಕ್ರೋಶ ಹೊರ ಹಾಕಿದ್ದಾರೆ.
ಪೋಷಕರಿಗೆ ಮೂರು ಹೊತ್ತಿನ ಊಟಕ್ಕಿಲ್ಲದಿದ್ದರೂ ಬೇರೆ ದಾರಿಯಿಲ್ಲದೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದೆ.
ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ, ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಮುಂದಿನ ಎಂಟು ವಾರಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿರುವ ಸಂಬಂಧ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಸರ್ಕಾರ ಉಚಿತ ಬಸ್ ಪ್ರಯಾಣ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸಿದರೂ, ನಮಗೆ ಅಭ್ಯಂತರವಿಲ್ಲ. ಆದರೆ, ಬಡ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಮೂಲ ಸೌಲಭ್ಯಗಳುಳ್ಳ ವ್ಯವಸ್ಥೆ ಕಲ್ಪಿಸಬೇಕು ಎಂಬುದೇ ನಮ್ಮ ಆಶಯ ಎಂದು ಪೀಠ ಪ್ರತಿಪಾದಿಸಿತು. ನಮ್ಮ ಸಂವಿಧಾನದ ಪ್ರಕಾರ ಶಿಕ್ಷಣ ಮೂಲಭೂತ ಹಕ್ಕಾಗಿದೆ. ಆದರೆ, ಸರ್ಕಾರಗಳು ಸರ್ಕಾರಿ ಶಾಲೆಗಳಲ್ಲಿ ಈ ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಮುಂದಾಗಿಲ್ಲ. ಇದು ಪರೋಕ್ಷವಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ತಳ್ಳುವಂತೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿತು.
The post High Court; ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸರ್ಕಾರ ವಿಫಲ – ಹೈಕೋರ್ಟ್ ಆಕ್ರೋಶ appeared first on Ain Live News.