ಹುಬ್ಬಳ್ಳಿ : ಹುಬ್ಬಳ್ಳಿಯ ಮೆಟ್ರೋ ಮಾಲ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಐದು ಮಹಡಿಗಳ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು.
ಘಟನೆಯ ದೃಶ್ಯಾವಳಿಗಳಲ್ಲಿ, ಮಾಲ್ನ ಬಾಲ್ಕನಿ ಮತ್ತು ಕಿಟಕಿಗಳ ಮೂಲಕ ಭುಗಿಲೆದ್ದ ಜ್ವಾಲೆಗಳು ಹೊರಗೆ ಕಾಣಿಸಿಕೊಂಡಿದ್ದು, ಮೇಲ್ಮಹಡಿಗಳಲ್ಲಿ ಬೆಂಕಿಯ ತೀವ್ರತೆ ಹೆಚ್ಚು ಇದ್ದುದಾಗಿ ತಿಳಿದುಬಂದಿದೆ. ಬೆಂಕಿಯಿಂದಾಗಿ ಮಾಲ್ನೊಳಗಿನ ಹಲವು ಅಂಗಡಿಗಳು ಹಾಗೂ ಮೂಲಸೌಕರ್ಯಗಳಿಗೆ ಭಾರೀ ಹಾನಿಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಸುದೀರ್ಘ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಅಗ್ನಿ ಅವಘಡದ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೀತೀಕರಣ ಕಾರ್ಯ ಮುಂದುವರಿದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
