ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ₹2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಥಾಯ್ಲೆಂಡ್ನ ಪುಕೆಟ್ ಹಾಗೂ ಮಲೇಶಿಯಾದಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕರ ಲಗೇಜ್ಗಳನ್ನು ಇಮಿಗ್ರೇಷನ್ ಹಾಗೂ ಕಸ್ಟಮ್ಸ್ ತಪಾಸಣೆಯ ವೇಳೆ ಪರಿಶೀಲಿಸಿದಾಗ, ಪ್ಯಾಕೆಟ್ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.
ವಶಪಡಿಸಿಕೊಂಡ ಮಾದಕ ವಸ್ತುಗಳ ಮಾರುಕಟ್ಟೆ ಮೌಲ್ಯ ಸುಮಾರು ₹2.97 ಕೋಟಿ ಎಂದು ಅಂದಾಜಿಸಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಕೆಐಎಬಿಯಲ್ಲಿ ಪತ್ತೆಯಾದ ಪ್ರಮುಖ ಡ್ರಗ್ ಪ್ರಕರಣಗಳಲ್ಲಿ ಇದೂ ಒಂದಾಗಿದೆ.
ಆರೋಪಿಗಳ ವಿರುದ್ಧ ಕಸ್ಟಮ್ಸ್ ಅಧಿಕಾರಿಗಳು ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಅಂತರಾಷ್ಟ್ರೀಯ ಡ್ರಗ್ ಸಾಗಣೆ ಜಾಲದ ಸಂಪರ್ಕಗಳ ಕುರಿತು ಮುಂದಿನ ತನಿಖೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
