ಬೆಂಗಳೂರು:
ಮುಂದಿನ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಮಾಜಿ ಸಿಎಂ, ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನಾನು ಎಲ್ಲೂ ಓಡಿ ಹೋಗುವುದಿಲ್ಲ. ಆ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ತಮ್ಮ ಸ್ಪರ್ಧೆ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದರು.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ನೀವು ಮುಂದಿನ ಚುನಾವಣೆಯಲ್ಲಿ ನಿಲ್ಲುತ್ತೀರಾ ಇಲ್ಲವೋ ಎಂಬ ಗೊಂದಲ ಇದೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.
ಈ ವೇಳೆ ಎಲ್ಲಿ ನಿಲ್ಲುತ್ತೀರಾ ಎಂದು ಪ್ರಶ್ನಿಸಿದ ಆರ್. ಅಶೋಕ್ ಗೆ ಪದ್ಮನಾಭ ನಗರದಲ್ಲಿ ನಿಲ್ಲುತ್ತೇನೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ನಾನು ಈಗ ಬಾದಮಿಯನ್ನು ಪ್ರತಿನಿಧಿಸುತ್ತಿದ್ದೇನೆ. ಬಾದಾಮಿಯಿಂದಲೇ ಸ್ಪರ್ಧಿಸುತ್ತೇನೆ ಎಂದರು.
2018ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂದುಕೊಂಡಿದ್ದೆ. ಆದರೆ ಈಗ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲೇ ಬೇಕು ಎಂಬ ಛಲ ಹೊಂದಿದ್ದೇನೆ. ಈ ಬಗ್ಗೆ ಯಾವುದೇ ಸಂಶಯಗಳು ಬೇಡ ಬಾದಾಮಿ ಕ್ಷೇತ್ರದಿಂದಲೇ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದರು.