ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳಿಗೆ ಬಹುನಿರೀಕ್ಷಿತ ಶುಭವಾರ್ತೆಯಾಗಿ, ಬೆಂಗಳೂರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ವಿಧಿಸಲಾಗಿದ್ದ ನಿಷೇಧವನ್ನು ಕರ್ನಾಟಕ ಸರ್ಕಾರ ಅಧಿಕೃತವಾಗಿ ಹಿಂಪಡೆದಿದೆ. ಇದರೊಂದಿಗೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಮತ್ತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಮುಖ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಅವಕಾಶ ಪಡೆದಿದೆ.
ರಾಜ್ಯ ಗೃಹ ಇಲಾಖೆಯು, ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ಭದ್ರತಾ, ಸುರಕ್ಷತೆ ಮತ್ತು ಜನಸಂದಣಿ ನಿಯಂತ್ರಣದ ಕಟ್ಟುನಿಟ್ಟಿನ ಷರತ್ತುಗಳನ್ನು ಪಾಲಿಸುವ ಶರತ್ತಿನೊಂದಿಗೆ ಪಂದ್ಯಗಳಿಗೆ ಅನುಮತಿ ನೀಡಿದೆ.
ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಅವರ ವರದಿಯ ಶಿಫಾರಸುಗಳನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ, ಸರ್ಕಾರದ ಅನುಮತಿಗೆ ಸಂತಸ ವ್ಯಕ್ತಪಡಿಸಿ, ಎಲ್ಲಾ ನಿಯಮಗಳು ಮತ್ತು ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಂಸ್ಥೆ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ತಿಳಿಸಿದರು. ತಜ್ಞ ಪರಿಶೀಲನಾ ಸಮಿತಿಗೆ ಈಗಾಗಲೇ ಸಮಗ್ರ ಅನುಷ್ಠಾನ ಯೋಜನೆಯನ್ನು ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.
2025ರ ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ಸಂದರ್ಭದಲ್ಲಿ ನಡೆದ ವಿಜಯೋತ್ಸವದ ಮೆರವಣಿಗೆಯಲ್ಲಿ ಉಂಟಾದ ನೂಕುನುಗ್ಗಲು ಮತ್ತು ಕಾಲ್ತುಳಿತದಿಂದ 11 ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಈ ದುರ್ಘಟನೆ ಬಳಿಕ ಭದ್ರತಾ ಕಾರಣಗಳಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಪ್ರಮುಖ ಪಂದ್ಯಗಳಿಗೆ ಅನುಮತಿ ನಿರಾಕರಿಸಲಾಗಿತ್ತು.

ನಿಷೇಧದ ಪರಿಣಾಮವಾಗಿ ವಿಜಯ್ ಹಜಾರೆ ಟ್ರೋಫಿ ಫೈನಲ್, ಮಹಿಳಾ ವಿಶ್ವಕಪ್ ಹಾಗೂ ಮುಂಬರುವ ಪುರುಷರ ಟಿ20 ವಿಶ್ವಕಪ್ ಪಂದ್ಯಗಳನ್ನು ಬೆಂಗಳೂರು ಕಳೆದುಕೊಂಡಿತ್ತು.
ಇದೀಗ ನಿಷೇಧ ಹಿಂಪಡೆಯಲ್ಪಟ್ಟಿರುವುದರಿಂದ, ಚಿನ್ನಸ್ವಾಮಿ ಕ್ರೀಡಾಂಗಣ ಮತ್ತೆ ಪ್ರಮುಖ ಕ್ರಿಕೆಟ್ ವೇದಿಕೆಯಾಗಿ ತನ್ನ ಸ್ಥಾನವನ್ನು ಮರಳಿ ಪಡೆಯುವ ಸಾಧ್ಯತೆ ಹೆಚ್ಚಾಗಿದೆ. ಐಪಿಎಲ್ ಸೇರಿದಂತೆ ಅಂತರರಾಷ್ಟ್ರೀಯ ಪಂದ್ಯಗಳು ಮತ್ತೆ ಬೆಂಗಳೂರಿನಲ್ಲಿ ನಡೆಯುವ ನಿರೀಕ್ಷೆ ಮೂಡಿದೆ.
ಶೀಘ್ರದಲ್ಲೇ ಕೆಎಸ್ಸಿಎ ಅಧ್ಯಕ್ಷ ಬಿ.ಕೆ. ವೆಂಕಟೇಶ್ ಪ್ರಸಾದ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಕಾರ್ಯಯೋಜನೆ ವಿವರಿಸಲಿದ್ದಾರೆ.
