ಬೆಂಗಳೂರು: ಐಪಿಎಲ್ ಪಂದ್ಯಾವಳಿ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊಬೈಲ್ ಕಳವು ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಪೊಲೀಸರು 9 ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸೇರಿದಂತೆ ಒಟ್ಟು 13 ಮಂದಿಯನ್ನು ಬಂಧಿಸಿ, 75 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 28, 2026ರಂದು ಆರ್ಸಿಬಿ ಹಾಗೂ ಎಸ್ಆರ್ಎಚ್ ನಡುವಿನ ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆ, ಪಂದ್ಯ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರ ಮೊಬೈಲ್ ಫೋನ್ಗಳು ಕಳವು ಆಗಿರುವ ಕುರಿತು ದೂರುಗಳು ದಾಖಲಾಗಿದ್ದವು.
ದಿನಾಂಕ ಮಾರ್ಚ್ 31ರಂದು ಓರ್ವ ಆರೋಪಿಯ ಜೊತೆಗೆ ಮೂವರು ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಿವಿಧ ಕಂಪನಿಯ ಸುಮಾರು 21 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದು, ಮೂವರು ಬಾಲಕರನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಿ ಪರಿವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ.
ಮುಂದಿನ ತನಿಖೆಯಲ್ಲಿ ಏಪ್ರಿಲ್ 2ರಂದು ಇನ್ನೂ ಆರು ಬಾಲಕರನ್ನು ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ.
ಏಪ್ರಿಲ್ 3ರಂದು ಪೊಲೀಸ್ ಕಸ್ಟಡಿಯಲ್ಲಿ ಇದ್ದ ನಾಲ್ವರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ ವೇಳೆ, ಕಳವು ಮಾಡಿದ ಇನ್ನೂ 70 ಮೊಬೈಲ್ಗಳು ಹಾಗೂ ಕೃತ್ಯಕ್ಕೆ ಬಳಸಿದ 5 ಮೊಬೈಲ್ಗಳು ಸೇರಿ ಒಟ್ಟು 75 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೂರು ಆರೋಪಿಗಳನ್ನು ಏಪ್ರಿಲ್ 3ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ 7 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಎಂ ಹಾಕೆ ಅವರ ಮಾರ್ಗದರ್ಶನದಲ್ಲಿ, ಕಬ್ಬನ್ ಪಾರ್ಕ್ ಉಪವಿಭಾಗದ ಎಸಿಪಿ ಡಾ. ಪ್ರಿಯದರ್ಶಿನಿ ಈಶ್ವರ ಸಾಣಿಕೊಪ್ಪ ಅವರ ನೇತೃತ್ವದಲ್ಲಿ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ದೇವೇಂದ್ರಪ್ಪ ಕೆ.ಎಸ್ ಮತ್ತು ಸಿಬ್ಬಂದಿಗಳ ತಂಡ ಯಶಸ್ವಿಯಾಗಿ ನಡೆಸಿದೆ.
