ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.
ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ.ಮಹೇಶ್ ಎಂಬುವರ ದೂರಿನ ಮೇರೆಗೆ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದ್ದು, ಬ್ಯಾಂಕ್ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ. ಅಲ್ಲದೆ, ಈ ಸಂಬಂಧ ಸಚಿವ ಬಿ.ನಾಗೇಂದ್ರ ಅವರಿಗೂ ಕೂಡ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಎಸ್ಐಟಿ ಈ ಪ್ರಕರಣದ ವರ್ಗಾವಣೆಗೆ ನಿರಾಕರಿಸಿದರೆ ಸಿಬಿಐ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಯೂನಿಯನ್ ಬ್ಯಾಂಕ್‌ನಲ್ಲಿರುವ ವಾಲ್ಮೀಕಿ ಅಭಿವೃದ್ದಿ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು. ಈ ಅಕ್ರಮವನ್ನು ಬೆನ್ನತ್ತಿದಾಗ ಫೈನಾನ್ಸ್ ಕಂಪನಿ ಸತ್ಯನಾರಾಯಣ ಅವರೇ 18 ನಕಲಿ ಖಾತೆಗಳನ್ನು ಮಾಡಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.