ಬೆಂಗಳೂರು: ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ನಿರ್ದೇಶನದಂತೆ, 2026ರ ಜನವರಿ 1ರಿಂದ 31ರವರೆಗೆ ರಾಜ್ಯಾದ್ಯಂತ “ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ” ಹಮ್ಮಿಕೊಳ್ಳಲಾಗುತ್ತಿದೆ.
ಈ ಅಭಿಯಾನವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಶ್ರೀ ವಿಭೂ ಬಕ್ರು (Patron-in-Chief, KSLSA), ನ್ಯಾಯಮೂರ್ತಿ ಶ್ರೀಮತಿ ಅನು ಶಿವರಾಮನ್ (Executive Chairperson, KSLSA) ಹಾಗೂ ಅಡ್ವೊಕೇಟ್ ಜನರಲ್ ಶ್ರೀ ಕೆ. ಶಶಿಕಿರಣ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗುತ್ತಿದೆ.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘಗಳು ಹಾಗೂ ವಿಮಾ ಕಂಪನಿಗಳ ಸಹಯೋಗದೊಂದಿಗೆ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮಗಳು ನಡೆಯಲಿವೆ.
ಅಪಘಾತ ನಿರ್ವಹಣೆಗೆ ತಂತ್ರಜ್ಞಾನ ಒತ್ತು
ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿಯ ನಿರ್ದೇಶನದಂತೆ, i-RAD / e-DAR ಯೋಜನೆಗಳ ಜಾರಿ, ಅಪಘಾತ ಸಂದರ್ಭಗಳಲ್ಲಿ ನಗದುರಹಿತ ಚಿಕಿತ್ಸೆ, ವಿಮಾ ಮೊತ್ತ ಪಾವತಿ ಪ್ರಕ್ರಿಯೆ, ಗೋಲ್ಡನ್ ಅವರ್ ಮಹತ್ವ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ, ಕಾರ್ಯಾಗಾರ ಹಾಗೂ ಸೆಮಿನಾರ್ಗಳನ್ನು ಆಯೋಜಿಸಲಾಗುತ್ತಿದೆ.
ಚಾಲಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಜಾಗೃತಿ
BMTC, KSRTC ಹಾಗೂ ಖಾಸಗಿ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ರಸ್ತೆ ಸುರಕ್ಷತೆ ಹಾಗೂ ಎಲೆಕ್ಟ್ರಿಕ್ ಬಸ್ ಚಾಲನೆ ಕುರಿತು ವಿಶೇಷ ತರಬೇತಿ ನೀಡಲಾಗುವುದು.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ, ಚಿತ್ರಕಲೆ, ಕಿರು ನಾಟಕ ಸ್ಪರ್ಧೆಗಳು, ಸಾರ್ವಜನಿಕರಿಗೆ ವಾಕಥಾನ್, ಮ್ಯಾರಥಾನ್, ಸೈಕಲ್ ಜಾಥಾ, ಮಾನವ ಸರಪಳಿ, ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ನಡೆಯಲಿವೆ.
ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣ ಬಳಕೆ
ಪತ್ರಿಕಾ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ, ರೇಡಿಯೋ ಜಿಂಗಲ್ಸ್, ಸಿನಿಮಾ ಮಂದಿರ ಜಾಹೀರಾತುಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ರಸ್ತೆ ಸುರಕ್ಷತಾ ಸಂದೇಶಗಳನ್ನು ವ್ಯಾಪಕವಾಗಿ ತಲುಪಿಸುವ ಯೋಜನೆ ರೂಪಿಸಲಾಗಿದೆ.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸಾರಿಗೆ, ಪೊಲೀಸ್, ರಸ್ತೆ ಸುರಕ್ಷತಾ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಬೆಂಗಳೂರು ವಕೀಲರ ಸಂಘದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.
ರಸ್ತೆ ಅಪಘಾತಗಳಿಂದ ಅಮೂಲ್ಯ ಜೀವಗಳನ್ನು ಉಳಿಸುವುದು ಈ ಮಾಸಾಚರಣೆಯ ಪ್ರಧಾನ ಗುರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
