
ಬೆಂಗಳೂರು, ಜುಲೈ 11: ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಡಿ.ಸಿ. ಕುನ್ಹಾ ಅವರ ನೇತೃತ್ವದ ಏಕವ್ಯಕ್ತಿ ಆಯೋಗ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ವರದಿಯನ್ನು ಜುಲೈ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಮೃತಪಟ್ಟ ಘಟನೆಯ ತನಿಖೆಗೆ ನೇಮಕಗೊಂಡ ನ್ಯಾಯಮೂರ್ತಿ ಕುನ್ಹಾ ಅವರ ಆಯೋಗವು ಎರಡು ಸಂಪುಟಗಳಲ್ಲಿನ ವರದಿಯನ್ನು ಇಂದು ಸಲ್ಲಿಸಿದೆ ಎಂದು ಸ್ಪಷ್ಟಪಡಿಸಿದರು.
ಮಾಧ್ಯಮದ ಪ್ರಶ್ನೆಗೆ ಉತ್ತರ ನೀಡಿದ ಅವರು, “ನಾನು ವರದಿಯನ್ನು ಇನ್ನೂ ಸಂಪೂರ್ಣವಾಗಿ ಓದಿಲ್ಲ. ಸಚಿವ ಸಂಪುಟ ಶಿಫಾರಸುಗಳನ್ನು ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಿದೆ” ಎಂದು ಹೇಳಿದರು.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಮಾನತುಗೊಳ್ಳುವನ್ನು ಸಿಎಟಿ ವಿರೋಧಿಸಿದ ವಿಷಯ ಮತ್ತು ಅದರ ಬಗ್ಗೆ ಆಯೋಗದ ವರದಿಯಲ್ಲಿ ಏನಾದರೂ ಉಲ್ಲೇಖ ಇದೆಯೇ ಎಂಬ ಪ್ರಶ್ನೆಗೆ ಉತ್ತರವಾಗಿ, “ಈ ವಿಷಯವನ್ನು ಸಂಪುಟ ಚರ್ಚಿಸುತ್ತದೆ. ಎಲ್ಲಾ ವಿಷಯಗಳ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು,” ಎಂದರು.
ಆಯೋಗವು ಸಲ್ಲಿಸಿದ ಶಿಫಾರಸುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ರಾಜ್ಯ ಹಿತಕ್ಕಾಗಿ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಆಶ್ವಾಸನೆ ನೀಡಿದರು.