ಸರ್ಕಾರಿ ಭೂಮಿ ಪರಭಾರೆ ಆರೋಪ
ಬೆಂಗಳೂರು:
ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ, ಕಚೇರಿ ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಎಸಿಬಿ ಬೆಂಗಳೂರು ನಗರ ಘಟಕದ 42 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡಿರುವ ಐದು ತಂಡಗಳು ಶುಕ್ರವಾರ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ನಡೆಸುತ್ತಿವೆ.
ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಹುದ್ದೆಯಲ್ಲಿದ್ದ ಅವಧಿಯಲ್ಲಿ ಸರ್ಕಾರಿ ಜಮೀನುಗಳನ್ನು ಅಕ್ರಮವಾಗಿ ಪರಭಾರೆ ಮಾಡಿರುವ ಆರೋಪ ಎದುರಿಸುತ್ತಿರುವ, ನ್ಯಾಯಾಂಗ ಬಡಾವಣೆಯಲ್ಲಿರುವ ರಂಗನಾಥ್ ಮನೆ, ದೊಡ್ಡಬಳ್ಳಾಪುರ ಪಟ್ಟಣದ ದತ್ತಾತ್ರೇಯ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಮನೆ, ಅಲ್ಲಿನ ಕನಕ ಟ್ರಸ್ಟ್ ಕಚೇರಿ, ಅಕ್ಷರ ಪಬ್ಲಿಕ್ ಶಾಲೆ ಹಾಗೂ ಬೆಂಗಳೂರಿನ ನಾಗರಭಾವಿಯಲ್ಲಿರುವ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
2020ರ ಮಾರ್ಚ್ 26ರಿಂದ ಜೂನ್ 20ರವರೆಗಿನ ಅವಧಿಯಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ತಹಶೀಲ್ದಾರ್ ಮೂಲಕ ವರದಿ ಪಡೆಯದೇ ಅಕ್ರಮವಾಗಿ 37 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಮೀನನ್ನು ಖಾಸಗಿಯವರಿಗೆ ಪರಭಾರೆ ಮಾಡಿ ಆದೇಶ ಹೊರಡಿಸಿರುವ ಆರೋಪ ರಂಗನಾಥ್ ಮೇಲಿದೆ. ಈ ಕಾರಣಕ್ಕಾಗಿ ಅವರನ್ನು ಸೇವೆಯಿಂದ ಅಮಾನತು ಮಾಡಿರುವ ರಾಜ್ಯ ಸರ್ಕಾರ, ಆರೋಪಗಳ ಕುರಿತು ತನಿಖೆ ನಡೆಸುವಂತೆ ಎಸಿಬಿಗೆ ಆದೇಶಿಸಿತ್ತು.
ಸರ್ಕಾರದ ಆದೇಶದಂತೆ ಎಫ್‌ಐಆರ್ ದಾಖಲಿಸಿ, ತನಿಖೆ ಆರಂಭಿಸಲಾಗಿದೆ. ರಂಗನಾಥ್ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಕಚೇರಿಯಲ್ಲೂ ಶೋಧ ನಡೆಸಲಾಗುತ್ತಿದೆ ಎಂದು ತನಿಖಾ ಸಂಸ್ಥೆ ಮಾಹಿತಿ ನೀಡಿದೆ.