ರಾಜ್ಯ ವಿಧಾನ ಸಭೆ : ಮೇ 10 ಕ್ಕೆ ಒಂದೇ ಹಂತದಲ್ಲಿ ಚುನಾವಣೆ, ಮೇ 13 ರಂದು ಮತ ಎಣಿಕೆ ಮತ್ತು ಫಲಿತಾಂಶ
ಬೆಂಗಳೂರು:
ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, 224 ಸದಸ್ಯ ಬಲದ ವಿಧಾನಸಭಾ ಚುನಾವಣೆಗೆ ಏಪ್ರಿಲ್ 13 ರಂದು ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದೆ.
ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ ಎಂದು ಕುಮಾರ್ ತಿಳಿಸಿದ್ದಾರೆ.
ಮತದಾರರು ಹೆಚ್ಚಿನ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು ಸೋಮವಾರ ಅಥವಾ ಶುಕ್ರವಾರವಲ್ಲ, ಬುಧವಾರದಂದು ಚುನಾವಣೆಯನ್ನು ನಿಗದಿಪಡಿಸಲಾಗಿದೆ ಎಂದು ಕುಮಾರ್ ಹೇಳಿದರು. ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಈಗಾಗಲೇ ಚುನಾವಣಾ ಪ್ರಚಾರವನ್ನು ಆರಂಭಿಸಿವೆ.
