ಬೆಂಗಳೂರು :
ಕೋವಿಡ್ ನ ಹೊಸ ತಳಿ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಆರೋಗ್ಯ ಇಲಾಖೆ, ವಿಕೋಪ ನಿರ್ವಹಣೆ, ತಜ್ಞರ ಸಮಿತಿಯವರೊಂದಿಗೆ ಇಂದು ಸಂಜೆ 4 ಗಂಟೆಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಧಾರವಾಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರದ ಶಾಲೆಗಳು ಮತ್ತು ಹಾಸ್ಟೆಲ್ ಗಳಲ್ಲಿ ಕೋವಿಡ್ ಉಲ್ಬಣವಾಗುತ್ತಿದೆ ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಮನಿಸಲಾಗಿದೆ. ರಾಜ್ಯದಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಹೊಸ ತಳಿಯ ಬಗ್ಗೆ ಸರ್ಕಾರ ಹಾಗೂ ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಹತ್ವದ ಚರ್ಚೆ ಇಂದಿನ ಸಭೆಯಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಬಾಕಿ ಇರುವ ಕಡತಗಳ ಶೀಘ್ರ ವಿಲೇವಾರಿಗೆ ಕ್ರಮ:
ಸರ್ಕಾರದಲ್ಲಿ 2 ವರ್ಷದಿಂದ ಕಡತಗಳು ವಿಲೇವಾರಿಯಾಗದೇ ಬಾಕಿ ಇರುವ ಬಗ್ಗೆ ಉತ್ತರಿಸುತ್ತಾ, ಕೆಲವು ಇಲಾಖೆಗಳಲ್ಲಿ ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳಿಂದ ಕಡತಗಳು ನಿರ್ಣಯವಾಗದೇ ಉಳಿದಿದೆ. ಇದಕ್ಕಿರುವ ಕಾನೂನು ಹಾಗೂ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ. ಈ ಬಗ್ಗೆ ಕಾನೂನು ಸಚಿವರ ಅಭಿಪ್ರಾಯವನ್ನೂ ಪಡೆದು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.