ಡಯಾಲಿಸಿಸ್ ಸದೃಢಗೊಳಿಸುತ್ತ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ
ಸೋಂಕು ರಹಿತ ಡಯಾಲಿಸಿಸ್ ಆರೋಗ್ಯ ಸೇವೆಗೆ ಆದ್ಯತೆ ನೀಡಿದ ಆರೋಗ್ಯ ಸಚಿವರು
ನಾಳೆ ಸಿಎಂ ಸಿದ್ದರಾಮಯ್ಯ ಅವರಿಂದ ಹೊಸ ಡಯಾಲಿಸಿಸ್ ಸೇವೆಗೆ ಚಾಲನೆ
ಬೆಂಗಳೂರು:
ಉಚಿತವಾಗಿ ಉತ್ತಮ ಡಯಾಲಿಸಿಸ್ ಸೇವೆ ಎದುರು ನೋಡುತ್ತಿದ್ದ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ಜನರಿಗೆ ಸಂತಸದ ಸುದ್ದಿ. ಸೋಂಕು ರಹಿತ ಡಯಾಲಿಸಿಸ್ ಸೇವೆ ಆರಂಭಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುವವರಿಗೆ ಇನ್ಮುಂದೆ ಏಕ ಬಳಕೆಯ ಡಯಾಲೈಸರ್ ಆರೈಕೆ ಲಭ್ಯವಾಗಲಿದೆ. ರಾಜ್ಯದಲ್ಲಿ ಕೆಲವು ದೂರು ದುಮ್ಮಾನಗಳಿಂದ ನಡೆಯುತ್ತಿದ್ದ ಡಯಾಲಿಸಿಸ್ ವ್ಯವಸ್ಥೆಯನ್ನ ಆರೋಗ್ಯಕರ ಹಂತಕ್ಕೆ ತರುವಲ್ಲಿ ಕಳೆದ 6 ತಿಂಗಳಿನಿಂದ ಸಾಕಷ್ಟು ಸವಾಲುಗಳನ್ನ ಎದುರಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊನೆಗೂ ರಾಜ್ಯದ ಡಯಾಲಿಸಿಸ್ ವ್ಯವಸ್ಥೆಯನ್ನ ಸರಿ ದಾರಿಗೆ ತರುವತ್ತ ಮಹತ್ವದ ಪಾತ್ರ ವಹಿಸಿದ್ದಾರೆ.
ಜನಸಾಮಾನ್ಯರಿಗೆ ಸೋಂಕು ರಹಿತ ಡಯಾಲಿಸಿಸ್ ಸೇವೆ ಕಲ್ಪಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದ್ಯತೆ ನೀಡಿದ್ದರು. ಡಾಯಾಲಿಸಿಸ್ ಕೇಂದ್ರಗಳಲ್ಲಿ ಅಲ್ಲಲ್ಲಿ ಅಸ್ವಸ್ಥಗೊಂಡಿದ್ದ ಬಹುಬಳಕೆಯ ಡಯಾಲೈಸರ್ ಯಂತ್ರಗಳಿಂದ ಡಯಾಲಿಸಿಸ್ ಪಡೆಯುತ್ತಿದ್ದವರಿಗೆ ಸೋಂಕು ತಗುಲುತ್ತಿರುವುದನ್ನ ಗಮನಿಸಿದ್ದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಇಡೀ ಡಯಾಲಿಸಿಸ್ ವ್ಯವಸ್ಥೆಯನ್ನ ಸದೃಢಗೊಳಿಸುವ ನಿಟ್ಟಿನಲ್ಲಿ ಏಕ ಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲು ನಿರ್ಧರಿಸಿದರು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ 800 ಹೊಸ ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದರು.
ಇದೀಗ ಹೊಸ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಬಹುತೇಕ ಅಂತಿಮ ಘಟ್ಟಕ್ಕೆ ತಲುಪಿದ್ದು, ನಾಳೆಯಿಂದ ಏಕ ಬಳಕೆಯ ಡಯಾಲಿಸಿಸ್ ಆರೋಗ್ಯ ಸೇವೆ ಆರಂಭವಾಗಲಿದೆ.
In a significant step forward, the Health Department has streamlined the dialysis services and will now offer single-use free dialysis services to ensure the elimination of infection. The dialyzers will be inaugurated tomorrow by Hon'ble Chief Minister Shri Siddaramaiah.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 26, 2024
These… pic.twitter.com/zSdnegUNUT
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಸಂಜೆ 5 ಗಂಟೆಗೆ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಸೇವೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಕೆ.ಸಿಜನರಲ್ ಆಸ್ಪತ್ರೆಯೊಂದರಲ್ಲೇ 20 ಹೊಸ ಏಕ ಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲಾಗಿದ್ದು, ಪ್ರತಿ ನಿತ್ಯ 72 ರೋಗಿಗಳಿಗೆ ಡಯಾಲಿಸಿಸ್ ಸೇವೆ ಒದಗಿಸುವ ಸಾಮರ್ಥ್ಯ ಕಲ್ಪಿಸಲಾಗಿದೆ.
ರಾಜ್ಯದಲ್ಲಿದ್ದ 171 ಡಯಾಲಿಸಿಸ್ ಕೇಂದ್ರಗಳನ್ನ 219 ಕ್ಕೆ ಹೆಚ್ಚಿಸಲಾಗಿದ್ದು, ಹೊಸದಾಗಿ 48 ತಾಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನ ಆರಂಭಿಸಲಾಗಿದೆ. 219 ಕೇಂದ್ರಗಳಲ್ಲಿ ಒಟ್ಟು 800 ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ವಿಭಾಗದ 57 ಡಯಾಲಿಸಿಸ್ ಕೇಂದ್ರಗಳಲ್ಲಿ 250 ಯಂತ್ರಗಳು, ಮೈಸೂರು ವಿಭಾಗದ 55 ಕೇಂದ್ರಗಳಲ್ಲಿ 222 ಯಂತ್ರಗಳು, ಬೆಳಗಾವಿ ವಿಭಾಗದ 62 ಕೇಂದ್ರಗಳಲ್ಲಿ 201 ಯಂತ್ರಗಳು, ಕಲಬುರಗಿ ವಿಭಾಗದ 45 ಕೇಂದ್ರಗಳಲ್ಲಿ 127 ಯಂತ್ರಗಳು ಸೇರಿದಂತೆ ಒಟ್ಟು 800 ಏಕಬಳಕೆಯ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ನಾಳೆಯಿಂದ 475 ಏಕಬಳಕೆಯ ಡಯಾಲೈಸರ್ ಗಳು ಕಾರ್ಯ ಆರಂಭಿಸಲಿದ್ದು, ರೋಗಿಗಳಿಗೆ ಸೊಂಕು ರಹಿತ ಡಯಾಲಿಸಿಸ್ ಸೇವೆ ಲಭ್ಯವಾಗಲಿದೆ. ಉಳಿದ ಕೇಂದ್ರಗಳಲ್ಲೂ ಒಂದು ತಿಂಗಳೊಳಗೆ ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳ ಸೇವೆ ಆರಂಭವಾಗಲಿದೆ.
ಪ್ರತಿಯೊಂದು ಡಯಾಲಿಸಿಸ್ ಸೈಕಲ್ ಗೆ 1573 ರೂ ಗಳು ವೆಚ್ಚವಾಗಲಿದ್ದು, ಸರ್ಕಾರವೇ ವೆಚ್ಚವನ್ನ ಭರಿಸಿ ರೋಗಿಗಳಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲಿದೆ. 800 ಡಯಾಲಿಸಿಸ್ ಯಂತ್ರಗಳಿಂದ ವಾರ್ಷಿಕ 7.20 ಲಕ್ಷ ಡಯಾಲಿಸಿಸ್ ಸೇವೆಗಳನ್ನ ಒದಗಿಸಲು ಸಾಮರ್ಥ್ಯ ಕಲ್ಪಿಸಲಾಗಿದ್ದು, ಸೊಂಕು ರಹಿತ ಡಯಾಲಿಸಿಸ್ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.