ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಲಭ್ಯತೆಯ ಕೊರತೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಾಲ್ಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಮರುಹೊಂದಾಣಿಕೆ (rationalisation) ಮೂಲಕ 24 ಗಂಟೆಯೂ ನಿರಂತರ ಸೇವೆ ಲಭ್ಯವಾಗುವಂತೆ ಅಗತ್ಯ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಪ್ರಶ್ನೆಯನ್ನು ಶಾಸಕರಾದ ಶಿವಲಿಂಗೇಗೌಡ ಅವರು ಕೇಳಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸೇವೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವುದರಿಂದ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸದನದ ಗಮನ ಸೆಳೆದಿದ್ದರು.
ಸರ್ಕಾರಿ ವೈದ್ಯರ ಖಾಸಗಿ ಸೇವೆ ಕುರಿತು ಮಾತನಾಡಿದ ಸಚಿವರು, ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಆದೇಶಗಳ ಪ್ರಕಾರ, ಸರ್ಕಾರಿ ವೈದ್ಯರು ತಮ್ಮ ಕರ್ತವ್ಯದ ಅವಧಿಯ ನಂತರ, ಸರ್ಕಾರಿ ಸೇವೆಗೆ ಅಡ್ಡಿಯಾಗದಂತೆ ಖಾಸಗಿಯಾಗಿ ಸೇವೆ ನೀಡಲು ಅನುಮತಿ ಇದೆ ಎಂದು ಸ್ಪಷ್ಟಪಡಿಸಿದರು.
ಆದರೆ, ಈಗ ಹೊಸ ಆದೇಶದ ಮೂಲಕ ಸರ್ಕಾರಿ ವೈದ್ಯರ ಖಾಸಗಿ ಸೇವೆಯನ್ನು ಹೊರರೋಗಿ ವಿಭಾಗ (OPD) ಮಟ್ಟಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ (IPD) ಚಿಕಿತ್ಸೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಈ ನಿರ್ಧಾರಕ್ಕೆ ಕಾರಣ ವಿವರಿಸಿದ ಸಚಿವರು, ಒಳರೋಗಿಗಳಿಗೆ ನಿರಂತರ ಆರೈಕೆ, ನಿಯಮಿತ ಪರೀಕ್ಷೆ ಮತ್ತು ವೈದ್ಯಕೀಯ ಮೇಲ್ವಿಚಾರಣೆ ಅಗತ್ಯವಾಗಿರುತ್ತದೆ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ IPD ಚಿಕಿತ್ಸೆ ನೀಡುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಅವರ ಕರ್ತವ್ಯಗಳಲ್ಲಿ ವ್ಯತ್ಯಯ ಉಂಟಾಗಿ, ರೋಗಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಆರೈಕೆಯಲ್ಲಿ ನಿರ್ಲಕ್ಷ್ಯದಿಂದ ಗಂಭೀರ ಸಮಸ್ಯೆಗಳು ಉಂಟಾದ ಹಲವು ನಿದರ್ಶನಗಳು ಇದ್ದು, ಕೆಲವು ಸಂದರ್ಭಗಳಲ್ಲಿ ಸಾವುಗಳಿಗೂ ಕಾರಣವಾಗಿವೆ ಎಂದು ಮಾನ್ಯ ಲೋಕಾಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಗಮನಕ್ಕೆ ತಂದಿರುವುದನ್ನು ಸಚಿವರು ಸದನಕ್ಕೆ ತಿಳಿಸಿದರು.
ಅಲ್ಲದೆ, ಕರ್ನಾಟಕ ಆಡಳಿತ ಸುಧಾರಣಾ ಆಯೋಗ ತನ್ನ ವರದಿಯಲ್ಲಿ, ಸಾರ್ವಜನಿಕ ಸೇವೆಗೆ ಆದ್ಯತೆ ನೀಡಬೇಕಾದರೆ ಸರ್ಕಾರಿ ವೈದ್ಯರ ಖಾಸಗಿ ಸೇವೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಶಿಫಾರಸು ಮಾಡಿರುವುದನ್ನು ಸಚಿವರು ಉಲ್ಲೇಖಿಸಿದರು.
ಕೇರಳ ಸೇರಿದಂತೆ ಇತರ ಕೆಲವು ರಾಜ್ಯಗಳಲ್ಲಿ ಇದೇ ರೀತಿಯ ನಿಯಮಗಳು ಈಗಾಗಲೇ ಜಾರಿಯಲ್ಲಿದ್ದು, ಅಲ್ಲಿ ಸರ್ಕಾರಿ ವೈದ್ಯರಿಗೆ ಕಠಿಣ ಷರತ್ತುಗಳೊಂದಿಗೆ OPD ಖಾಸಗಿ ಸೇವೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು.
ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರ ಖಾಸಗಿ ಸೇವೆಯನ್ನು ನಿಯಂತ್ರಿಸುವ ಕುರಿತು, ಹಿಂದಿನ ಸೂಚನೆಗಳ ಜೊತೆಗೆ ಈ ಹೊಸ ಆದೇಶವನ್ನು ಹೊರಡಿಸಲಾಗಿದೆ ಎಂದು ಸಚಿವರು ಹೇಳಿದರು.
ಹೊಸ ನಿಯಮಗಳ ಪ್ರಕಾರ, ಸರ್ಕಾರಿ ವೈದ್ಯರು ತಮ್ಮ ನಿಗದಿತ ಕರ್ತವ್ಯದ ಅವಧಿಯ ನಂತರ, ಸರ್ಕಾರಿ ಕೆಲಸಕ್ಕೆ ಅಡ್ಡಿಯಾಗದಂತೆ ಖಾಸಗಿ ಕ್ಲಿನಿಕ್ ಅಥವಾ ಆಸ್ಪತ್ರೆಯಲ್ಲಿ OPD ಸೇವೆ ನೀಡಬಹುದು. ಆದರೆ, ಅದರ ಸಂಪೂರ್ಣ ವಿವರಗಳನ್ನು ಸರ್ಕಾರಕ್ಕೆ ಘೋಷಿಸುವುದು ಕಡ್ಡಾಯವಾಗಿರುತ್ತದೆ.
ಈ ಷರತ್ತುಗಳನ್ನು ಉಲ್ಲಂಘಿಸಿದರೆ, ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅಡಿಯಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
