ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಮಧ್ಯಂತರ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಪರಿಹಾರ ನೀಡಿದ್ದು, ಶಿಕ್ಷೆಯ ಜಾರಿಗೆ ತಾತ್ಕಾಲಿಕ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
2016ರಲ್ಲಿ ನಡೆದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪಿನ ನಂತರ ಕುಲಕರ್ಣಿ ಅವರ ಶಾಸಕ ಸ್ಥಾನವೂ ಅನರ್ಹಗೊಂಡಿತ್ತು.
ಹೈಕೋರ್ಟ್ ಇದೀಗ ಶಿಕ್ಷೆಯನ್ನು ಅಮಾನತುಗೊಳಿಸಿ ₹5 ಲಕ್ಷ ವೈಯಕ್ತಿಕ ಬಾಂಡ್ ಹಾಗೂ ಅಗತ್ಯ ಶ್ಯೂರಿಟಿ ಸಲ್ಲಿಸುವ ಷರತ್ತಿನೊಂದಿಗೆ ಜಾಮೀನು ನೀಡಿದೆ. ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ತೊರೆಯಬಾರದು ಎಂಬ ಷರತ್ತನ್ನೂ ವಿಧಿಸಲಾಗಿದೆ.
ಪ್ರಕರಣದಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಪೊಲೀಸ್ ಇನ್ಸ್ಪೆಕ್ಟರ್ ಚನ್ನಕೇಶವ ಅವರಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಟ್ಟಾರೆ 10 ಅಪರಾಧಿಗಳಿಗೆ ಮಧ್ಯಂತರ ಪರಿಹಾರ ದೊರೆತಿದೆ.
ಪ್ರಕರಣದ ಸಾಮಾಜಿಕ ಹೋರಾಟಗಾರ ಬಸವರಾಜ್ ಕೋರ್ ಅವರು ಹೈಕೋರ್ಟ್ ಆದೇಶದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ಜೀವಾವಧಿ ಶಿಕ್ಷೆಯಂತಹ ಪ್ರಕರಣದಲ್ಲಿ ಶಿಕ್ಷೆಗೆ ತಾತ್ಕಾಲಿಕ ತಡೆ ಸಿಗುವುದು ಅಪರೂಪ ಎಂದು ಹೇಳಿದರು. ಆದಾಗ್ಯೂ, ಅಪೀಲಿನ ವಿಚಾರಣೆಯ ಅವಧಿಯಲ್ಲಿ ಜಾಮೀನು ನೀಡುವುದು ಸಾಮಾನ್ಯ ಕಾನೂನು ಪ್ರಕ್ರಿಯೆ ಎಂದರು.
ವಿಶೇಷ ನ್ಯಾಯಾಲಯವು ಸಾಕ್ಷ್ಯಾಧಾರಗಳು, ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪಗಳು ಹಾಗೂ ಇತರೆ ದಾಖಲೆಗಳನ್ನು ಪರಿಗಣಿಸಿ ಶಿಕ್ಷೆ ವಿಧಿಸಿತ್ತು ಎಂದು ಅವರು ಹೇಳಿದರು.
ಹೈಕೋರ್ಟ್ ಆದೇಶದ ಸಂಪೂರ್ಣ ಪ್ರತಿಯನ್ನು ಪರಿಶೀಲಿಸಿದ ಬಳಿಕ ಶಿಕ್ಷೆಗೆ ತಡೆ ನೀಡಿರುವ ಆಧಾರಗಳನ್ನು ಅಧ್ಯಯನ ಮಾಡಿ ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಬಸವರಾಜ್ ಕೋರ್ ತಿಳಿಸಿದ್ದಾರೆ.
ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆಗೆ ಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ, ಹೈಕೋರ್ಟ್ ಆದೇಶದ ಷರತ್ತುಗಳನ್ನು ಪರಿಶೀಲಿಸಿದ ಬಳಿಕವೇ ಸ್ಪಷ್ಟತೆ ಸಿಗಲಿದೆ ಎಂದು ಅವರು ಹೇಳಿದರು. ಸಾಕ್ಷಿಗಳಿಗೆ ಬೆದರಿಕೆ ಹಾಗೂ ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣಗಳು ಇನ್ನೂ ಬಾಕಿ ಇರುವುದರಿಂದ ಅವುಗಳಲ್ಲಿನ ನಿರ್ಬಂಧಗಳನ್ನೂ ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
