ಬೆಂಗಳೂರು:
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ವಜಾ ಮಾಡಿ ಆದೇಶಿಸಿದ್ದು ಈ ಮೂಲಕ ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್ವೈಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 2015ರ ಡಿಸೆಬರ್ 19ರ ಕೇಸ್ನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಎಂಬುವರು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಲೋಕಾಯುಕ್ತ ಸಂಸ್ಥೆಯೂ ತನಿಖೆ ನಡೆಸಿತ್ತು.
ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಧೀರ್ಘ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣವನ್ನು ವಜಾ ಮಾಡಿದೆ.