ಬೆಂಗಳೂರು:
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ನಾಟಕ ಪ್ರದರ್ಶಿಸಿದ್ದಕ್ಕಾಗಿ ಬೀದರ್‌ನ ಶಾಲೆಯೊಂದರ ಆಡಳಿತ ಮಂಡಳಿ ವಿರುದ್ಧ ದಾಖಲಿಸಲಾದ ದೇಶದ್ರೋಹದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಹೈಕೋರ್ಟ್‌ನ ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು 2020 ರಲ್ಲಿ ಬೀದರ್‌ನ ಶಾಹೀನ್ ಶಾಲೆಯ ಆಡಳಿತದ ನಾಲ್ವರ ವಿರುದ್ಧ ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ರದ್ದುಗೊಳಿಸಿ ಆದೇಶವನ್ನು ನೀಡಿದರು.
ಪ್ರಕರಣ ರದ್ದು ಕೋರಿ ಅಲ್ಲಾವುದ್ದೀನ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನಗೌಡರ್ ಅವರು ಶಾಹೀನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧದ ದೇಶದ್ರೋಹ ಕೇಸ್ನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ/ ರಾಷ್ಟ್ರೀಯ ಪೌರತ್ವ ನೋಂದಣಿ/ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸಿ ಮಕ್ಕಳಿಂದ ನಾಟಕ ಪ್ರದರ್ಶಿಸಿದ್ದ ಬೀದರ್ ನಗರದ ಶಾಹೀನ್ ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥ, ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿಯೊಬ್ಬರ ಪಾಲಕರಾದ ಅನುಜಾ ಮಿನ್ಸಾ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಲಾಗಿತ್ತು.
ನಂತರ ಬೀದರ್ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಶಾಲಾ ಆಡಳಿತ ಮಂಡಳಿಯ ಐವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು.
ಬುಧವಾರದಂದು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದ್ದು, ತೀರ್ಪಿನ ಪ್ರತಿಗಾಗಿ ಕಾಯಲಾಗುತ್ತಿದೆ.