ಬೆಂಗಳೂರು:
ರಾಜ್ಯದಲ್ಲಿ 2020ರ ಸೆ.16ರ ನಂತರದಲ್ಲಿ ವಿಶೇಷ ನ್ಯಾಯಾಲಯದಲ್ಲಿ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾಗಿ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳ (Criminal Cases) ಕುರಿತು ಮುಂದಿನ ಮೂರು ವಾರಗಳಲ್ಲಿ ಮಾಹಿತಿ ಸಲ್ಲಿಸುವಂತೆ ಹೈಕೋರ್ಟ್ (High Court) ರಿಜಿಸ್ಟ್ರಾರ್ ಗೆ ಸೂಚನೆ ನೀಡಿದೆ.
ಶಾಸಕರು ಹಾಗೂ ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್‍ನ ನಿರ್ದೇಶನದ ಮೇರೆಗೆ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಸೂಚನೆ ನೀಡಿ, ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಹಾಜರಿದ್ದ ಪ್ರಕರಣದ ಅಮಿಕಸ್ ಕ್ಯೂರಿಯಾಗಿರುವ ಆದಿತ್ಯ ಸೋಂಧಿ ಅವರು, ಪ್ರಕರಣ ಸಂಬಂಧ ಸಾಕಷ್ಟು ಪ್ರಕರಣಗಳಿದ್ದು, ಸುದೀರ್ಘ ಅಧ್ಯಯನ ನಡೆಸಬೇಕಾದ ಅಗತ್ಯವಿದೆ. ಜೊತೆಗೆ, ಈ ಸಂಬಂಧ ವಿಶೇಷ ನ್ಯಾಯಾಲಯಗಳಿಂದ ಸಾಕಷ್ಟು ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ಮುಂದಿನ ವಿಚಾರಣೆ ವೇಳೆಗೆ ಕೋರ್ಟ್ ಮುಂದೆ ಹಾಜರುಪಡಿಸಬೇಕು ಎಂದು ರಿಜಿಸ್ಟ್ರಾರ್ ಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ಪ್ರಕರಣವೇನು?:
ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧದ ಪ್ರಕರಣಗಳ ಶೀಘ್ರ ವಿಲೇವಾರಿ ಮತ್ತು ಮೇಲ್ವಿಚಾರಣೆ ನಡೆಸುವಂತೆ ದೇಶದ ಎಲ್ಲ ಹೈಕೋರ್ಟ್‍ಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅದರಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ಪ್ರಕರಣದಲ್ಲಿ ಆದಿತ್ಯ ಸೋಂಧಿ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಕ ಮಾಡಲಾಗಿತ್ತು.