ಬೆಂಗಳೂರು:
ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಮತ್ತು ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿದ್ದು, ಶಾಸಕರಾಗಿ ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಅಶ್ವಥ್ ರಾವ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಚಿತ್ತಾಪುರ ಕ್ಷೇತ್ರದ ಶಾಸಕ, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬುಧವಾರ ಸಮನ್ಸ್ ಜಾರಿ ಮಾಡಿದೆ.
ಸೆಪ್ಟೆಂಬರ್ 5ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪ್ರಿಯಾಂಕ್ ಖರ್ಗೆ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ಪ್ರಮೀಳಾ ನೇಸರ್ಗಿ ಅವರು, ಪ್ರಿಯಾಂಕ್ ಖರ್ಗೆ ಅವರು ಜಾತಿ ಪ್ರಮಾಣಪತ್ರದ ಬಗ್ಗೆ ಮತ್ತು ಅವರ ಶಿಕ್ಷಣದ ಬಗ್ಗೆ ಚುನಾವಣಾ ಆಯೋಗಕ್ಕೆ ಸರಿಯಾದ ಮಾಹಿತಿ ನೀಡಲು ವಿಫಲವಾಗಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ ಗೆದ್ದಿರುವ ಆರೋಪದ ಮೇಲೆ ಪ್ರಿಯಾಂಕ್ ಖರ್ಗೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(1)ರ ಅಡಿಯಲ್ಲಿ ಮತದಾರರಿಗೆ ಲಂಚದ ಮೂಲಕ ಆಮಿಷವೊಡ್ಡುವುದು ಕಾನೂನುಬಾಹಿರವಾಗಿರುವುದರಿಂದ ಅವರನ್ನು ಅನರ್ಹಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.