ಬೆಂಗಳೂರು:
ವಿದ್ಯಾರ್ಥಿಗಳು ಆಯಾ ಶಾಲಾಕಾಲೇಜುಗಳು ಸೂಚಿಸುವ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ನ್ಯಾಯಾಲಯವು ಮಂಗಳವಾರ ತೀರ್ಪು ನೀಡಿದ ನಂತರ ಮಾತನಾಡಿದ ಅವರು, `ರಾಜ್ಯ ಹೈಕೋರ್ಟ್ ಸಮವಸ್ತ್ರದ ವಿಚಾರದಲ್ಲಿ ಸರಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಇದನ್ನು ಎಲ್ಲ ವಿದ್ಯಾರ್ಥಿಗಳೂ ಗೌರವಿಸಿ, ಪಾಲಿಸಬೇಕು’ ಎಂದಿದ್ದಾರೆ.
`ಯಾವುದೇ ಧರ್ಮದ ಮಕ್ಕಳಾದರೂ ಶಿಕ್ಷಣಕ್ಕೆ ಆದ್ಯ ಗಮನ ಕೊಟ್ಟು, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಕಡೆಗೆ ಗಮನ ಕೊಡಬೇಕು. ಯಾವುದೇ ಧಾರ್ಮಿಕ ವಸ್ತ್ರಗಳತ್ತ ಅನಗತ್ಯ ಆದ್ಯತೆ ನೀಡುವ ಮೂಲಕ ಬದುಕಿನ ಸದವಕಾಶಗಳನ್ನು ವ್ಯರ್ಥ ಮಾಡಿಕೊಳ್ಳಬಾರದು. ಈ ಮೂಲಕ ಎಲ್ಲರೂ ಸೌಹಾರ್ದದಿಂದ ಮತ್ತು ಪರಸ್ಪರ ಗೌರವದಿಂದ ಬದುಕಬೇಕು’ ಎಂದು ಸಚಿವರು ಹೇಳಿದ್ದಾರೆ.
`ಹಿಂದೆಂದೂ ಶಾಲಾಕಾಲೇಜುಗಳಲ್ಲಿ ಇಂತಹ ವಿವಾದ ಕಂಡುಬಂದಿರಲಿಲ್ಲ. ಕೆಲವು ವಿಚ್ಛಿದ್ರಕಾರಿ ಶಕ್ತಿಗಳು ಬೇಕೆಂದೇ ಈ ವಿವಾದವನ್ನು ಸೃಷ್ಟಿಸಿದ್ದವು. ನ್ಯಾಯಾಲಯವು ಈ ವಿಚಾರವನ್ನು ಆಳವಾಗಿ ಅಧ್ಯಯನ ಮಾಡಿ, ಸರಿಯಾದ ತೀರ್ಪು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಅದು ಇಂದು ನೀಡಿದೆ’ ಎಂದು ಅವರು ಸ್ವಾಗತಿಸಿದ್ದಾರೆ.