ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮತ್ತೆ ನಗರಾಭಿವೃದ್ಧಿ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದ ಬಿ.ಎ.ಬಸವರಾಜ (ಬೈರತಿ) ಅವರು ಎಲ್ಲಾ ಮಹಾನಗರ ಪಾಲಿಕೆ ಪ್ರದೇಶದ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅಯುಕ್ತರಿಗೆ ಸೂಚಿಸಿದರು.
ಪ್ರತಿ ದಿನ ಒಂದು ಗಂಟೆಗಳ ಕಾಲ ನಗರದಲ್ಲಿ ಆಯುಕ್ತರು ಸಂಚರಿಸುವ ಮೂಲಕ ಸ್ವಚ್ಚತಾ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದರು.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಸರ್ಕಾರದ ಅನುಮೋದನೆ ದೊರೆತಿದ್ದು, ಆದಷ್ಟು ಬೇಗ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಯೋಜನೆಯನ್ನು ಕಾಲ ಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ಬೀದಿ ದೀಪಗಳ ದುರಸ್ತಿ ಮತ್ತು ನಿರ್ವಹಣೆ ಸರಿಯಾಗಿ ಆಗಬೇಕು. ಹಲ ಹೊಸ ಬಡಾವಣೆ, ಪ್ರದೇಶಗಳಲ್ಲಿ ಬೀದಿ ದೀಪಗಳು ಇಲ್ಲ ಎಂಬ ದೂರುಗಳು ಬಂದಿದ್ದು, ಅದನ್ನು ನಿವಾರಣೆ ಮಾಡಬೇಕು ಎಂದು ತಾಕೀತು ಮಾಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಸ್ವತ್ತುಗಳ ಅಸ್ತಿ ತೆರಿಗೆಯನ್ನು ಸರಿಯಾಗಿ ಸಂದಾಯ ಆಗುವ ರೀತಿಯಲ್ಲಿ ನೋಡಿಕೊಳ್ಳಬೇಕು. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ಜಾರಿ ಮಾಡುವ ಮೂಲಕ ವಸೂಲಿಗೆ ಮುಂದಾಗಬೇಕು. ಯಾವುದೇ ರೀತಿಯ ಒತ್ತಡಕ್ಕೆ ಮಣಿಯಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಬರುತ್ತಿದೆ. ಅವರ ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಬೇಕು. ಸ್ಥಳೀಯ ಸಮಸ್ಯೆಗಳು ವಿಧಾನ ಸೌಧದ ಸಚಿವರ ಕಚೇರಿಯವರೆಗೆ ಬರದ ಹಾಗೆ ಪಾಲಿಕೆ ಆಯುಕ್ತರು ಸ್ಥಳೀಯ ಮಟ್ಟದಲ್ಲಿ ಅದನ್ನು ಪರಿಹರಿಸಬೇಕು. ಸಂಬಂಧಿಸಿದ ಅಧಿಕಾರಿ ವರ್ಗದವರು ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಸ್ಪಂದಿಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ತಾಕೀತು ಮಾಡಿದರು.
ಸೋಮವಾರ ನಡೆದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ.ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಟಿ. ರೇಜು, ದಾವಣಗೆರೆ, ಶಿವಮೊಗ್ಗ, ಮಂಗಳೂರು, ತುಮಕೂರು, ಬಳ್ಳಾರಿ, ಮೈಸೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಇಲಾಖೆಯ ಹಿರಿಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.