ಪೂಜೆ ಸಲ್ಲಿಸಿ ಚಾಲನೆ ನೀಡಲಿರುವ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಇತರ ಗಣ್ಯರು
ಮೈಸೂರು:
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಮೇಲೆ ವಿರಾಜಮಾನವಾಗಿ ಸಾಗುವ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಈ ಬಾರಿ ಚಾಮುಂಡಿಬೆಟ್ಟದಿಂದ ಅಲಂಕೃತ ವಾಹನದಲ್ಲಿ ನಾದಸ್ವರ ವಿವಿಧ ಕಲಾತಂಡಗಳ ಜೊತೆಗೆ ಅರಮನೆಗೆ ತರಲಾಗುತ್ತಿದೆ.
ವಿಜಯದಶಮಿಯ ದಿನವಾದ ಶುಕ್ರವಾರ ಬೆಳಗ್ಗೆ 8:00 ಗಂಟೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಚಾಲನೆ ನೀಡುವರು.
ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದಘೋಷ, ಚಂಡೆ, ನವದುರ್ಗೆಯರು ಸಾಗುವರು. ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡಿಂಚ್ ವೃತ್ತದ ಮೂಲಕ ಅರಮನೆ ಪ್ರವೇಶಿಸಲಾಗುತ್ತದೆ.
ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್. ನಾಗೇಂದ್ರ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಮೈಸೂರು ಮಹಾನಗರ ಪಾಲಿಕೆಯ ಸದಸ್ಯರುಗಳು, ಮತ್ತಿತರ ಗಣ್ಯರು ಸೇರಿ ಶ್ರೀ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಚಾಲನೆ ನೀಡುವರು.