
ಬೆಂಗಳೂರು:
ರಾಜ್ಯಾದಂತ ರಾಷ್ಟ್ರೀಯ ಲೋಕ್ ಅದಾಲತ್‍ಅನ್ನು 9ನೇ ಸೆಪ್ಟಂಬರ್ 2023ರಂದು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಧಾನ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮುರಳೀಧರ ಪೈ ಬಿ ಅವರು ತಿಳಿಸಿದರು.
ಇಂದು ನಗರದ ಸಿವಿಲ್ ನ್ಯಾಯಾಲಯದ ಪ್ರಾಧಿಕಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (RERA) ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು (Consumer Disputes) ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು (DRT), ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC), ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಲೋಕ್ ಅದಾಲತ್‍ನಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ 11ನೇ ಫೆಬ್ರವರಿ 2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋóಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದದ ಸದಸ್ಯ ಕಾರ್ಯದರ್ಶಿ ವರದರಾಜ್ ಬಿ ಅವರು ಉಪಸ್ಥಿತರಿದ್ದರು.