ಬೆಂಗಳೂರು:
ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಸ್ಥಗಿತಗೊಳಿಸಲಾಗುತ್ತಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ ಅವರು, ಯೋಜನೆ ನಿಂತು ಹೋಗುತ್ತದೆ ಅಂತ ಊಹಾಪೋಹಗಳು ಕೇಳಿ ಬರುತ್ತಿವೆ. ಒಂದು ಪಕ್ಷದವರು ಈ ಹಾಪೋಹಗಳನ್ನು ಮಾಡಿಸುತ್ತಿದ್ದಾರೆ. ಆದರೆ ಇನ್ನು 10 ವರ್ಷ ಈ ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆ ಸ್ಥಗಿತಗೊಳ್ಳಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದೆ @BJP4Karnataka.
— Ramalinga Reddy (@RLR_BTM) August 16, 2023
ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಇನ್ನೂ 10 ವರ್ಷ ಇರಲಿದೆ.
ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಕುಗ್ಗಿಸಲು ಬಿಜೆಪಿ ನಕಲಿ ಸುದ್ದಿಯ ಮೊರೆ ಹೋಗಿದೆ, ಸಾರ್ವಜನಿಕರು ಇಂತಹ ಯಾವುದೇ ನಕಲಿ ಸುದ್ದಿಗಳಿಗೆ… pic.twitter.com/5ZckwGHzSX
ಇನ್ನು ಕೆಎಸ್ ಆರ್ ಟಿಸಿ ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಮುಂದುವರಿಯುತ್ತೆ. ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಕೆಎಸ್ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.