ಬೆಂಗಳೂರು:
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ರದ್ದುಗೊಂಡಿದ್ದರಿಂದ, ವಿದ್ಯಾರ್ಥಿಗಳ ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳು ಮತ್ತು ಎಸ್‌ಎಸ್‌ಎಲ್‌ಸಿ ಅಂಕಗಳನ್ನು ಆಧರಿಸಿ ಶೀಘ್ರದಲ್ಲೇ ಫಲಿತಾಂಶ ಘೋಷಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಅಂಕದ ಜೊತೆಗೆ, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ಕೂಡ ಪರಿಗಣಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ ಎಂದರು.
ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ ಎಂದರು.
ಪುನರಾವರ್ತಿತ ಅಭ್ಯರ್ಥಿಗಳ ತೇರ್ಗಡೆ :
ಕೋವಿಡ್-19 ಸೋಂಕು ಪ್ರಸರಣದ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದ ಪುನರಾವರ್ತಿತ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸಲು ಇಲಾಖೆ ನಿರ್ಧರಿಸಿದೆ ಎಂದರು.
ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು ಮತ್ತು ಶೇ. 5ರಷ್ಟು ಕೃಪಾಂಕಗಳನ್ನು ನೀಡಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್-19 ಸೋಂಕು ಪ್ರಸರಣದ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರ ಕೈಗೊಂಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಪುನರಾವರ್ತಿತ ಅಭ್ಯರ್ಥಿಗಳನ್ನೂ ಸಹ ಉತ್ತೀರ್ಣಗೊಳಿಸಬೇಕೆಂದು ಕೆಲವರು ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಪುನರಾವರ್ತಿತ ಅಭ್ಯರ್ಥಿಗಳನ್ನೂ ಈ ವರ್ಷದ ಮಟ್ಟಿಗೆ ಉತ್ತೀರ್ಣಗೊಳಿಸುವ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದು, ಸರ್ಕಾರದ ನಿಲುವನ್ನು ಹೈಕೋರ್ಟ್ ಸಮ್ಮತಿಸಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.