ಬೆಂಗಳೂರು:
ಭಾರತ್ ಜೋಡೋ ಯಾತ್ರೆಗಾಗಿ ಹಿಟ್ ಚಿತ್ರ ಕೆಜಿಎಫ್ ಚಾಪ್ಟರ್ 2 ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನತೆ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಮೂವರು ಕಾಂಗ್ರೆಸ್ ಮುಖಂಡರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಬುಧವಾರ ವಜಾಗೊಳಿಸಿದೆ.
“ಅರ್ಜಿದಾರರು ಅನುಮತಿಯಿಲ್ಲದೆ ಮೂಲ ಕೋಡ್ ಅನ್ನು ತಿದ್ದಿದ್ದಾರೆಂದು ತೋರುತ್ತದೆ ಮತ್ತು ಇದು ನಿಸ್ಸಂದೇಹವಾಗಿ ಕಂಪನಿಯ ಕಾಪಿರೈಟ್ ಉಲ್ಲಂಘನೆಯಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಆಗಮಿಸಿದ್ದ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಹಾಗೇ ಹರಿಬಿಟ್ಟ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್..’ ಹಾಡನ್ನು ಬಳಕೆ ಮಾಡಲಾಗಿತ್ತು.
ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್ಟಿ ಮ್ಯೂಸಿಕ್ ಎಂ.ನವೀನ್ ಕುಮಾರ್ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಾಡಿನ ಕಾಪಿರೈಟ್ ಉಲ್ಲಂಘಸಿಲಾಗಿದೆ ಎಂದು ಆರೋಪಿಸಿದ್ದಾರೆ.