ಬೆಳಗಾವಿ: ಕರ್ನಾಟಕದಲ್ಲಿ ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಮರಾಠಾ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಕನಿಷ್ಠ ₹1000 ಕೋಟಿ ಅನುದಾನ ಮೀಸಲಿಡಬೇಕು ಎಂದು ಮರಾಠಾ ಮುಖಂಡ ಕಿರಣ್ ಜಾಧವ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಪ್ರಕಟಣೆ ಮೂಲಕ ಮನವಿ ಮಾಡಿರುವ ಅವರು, ನಿಗಮಕ್ಕೆ ಈಗ ನೀಡಲಾಗುತ್ತಿರುವ ಅನುದಾನ ಸಮುದಾಯದ ಅಗತ್ಯಗಳಿಗೆ ಸಾಲುತ್ತಿಲ್ಲ ಎಂದು ತಿಳಿಸಿದ್ದಾರೆ. ಸಾಮಾಜಿಕ ಸಮಾನತೆಗೆ ಆದ್ಯತೆ ನೀಡುವ ಮುಖ್ಯಮಂತ್ರಿಗಳು ಈ ಬಾರಿ ಬಜೆಟ್ನಲ್ಲಿ ಹೆಚ್ಚಿನ ಮೊತ್ತವನ್ನು ಮೀಸಲಿಟ್ಟು ವಿಶೇಷ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿವೇತನ ವಿಸ್ತರಣೆ, ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು, ವಿದೇಶ ವ್ಯಾಸಂಗ ಸಹಾಯಧನ, ಕೃಷಿ ಮತ್ತು ಪಶುಸಂಗೋಪನೆ ಚಟುವಟಿಕೆಗಳಿಗೆ ಪ್ರೋತ್ಸಾಹ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಇದೇ ವೇಳೆ, ನಿರುದ್ಯೋಗಿ ಯುವಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಿ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಯೋಜನೆಗಳಿಗೆ ಆದ್ಯತೆ ನೀಡಬೇಕು ಎಂದು ಕಿರಣ್ ಜಾಧವ್ ಹೇಳಿದ್ದಾರೆ.
ರಾಜ್ಯದಲ್ಲಿ ಮರಾಠಾ ಸಮುದಾಯದವರು ಶಿಕ್ಷಣ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಇನ್ನೂ ಹಲವು ಸವಾಲುಗಳನ್ನು ಎದುರಿಸುತ್ತಿರುವುದರಿಂದ, ಬರುವ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
