ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸಿದರೆ ₹5,000 ದಂಡಕ್ಕೆ ಕೃಷ್ಣ ಬೈರೇಗೌಡ ಒತ್ತಾಯ
ಬೆಂಗಳೂರು, ಜುಲೈ 22: ಪಾದಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ವಿಧಿಸಲಾಗುತ್ತಿರುವ ಪ್ರಸ್ತುತ ₹500 ದಂಡವನ್ನು ₹5,000ಕ್ಕೆ ಹೆಚ್ಚಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆದು ಒತ್ತಾಯಿಸುವುದಾಗಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ಹಾಗೂ ಇಂತಹ ಉಲ್ಲಂಘನೆಗಳನ್ನು ತಡೆಯಲು ಕಠಿಣ ದಂಡ ಅಗತ್ಯ ಎಂದು ಅವರು ಹೇಳಿದ್ದಾರೆ.
ಬುಧವಾರ ಬೆಂಗಳೂರು ಸಂಚಾರಿ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪಾದಚಾರಿಗಳ ಹಕ್ಕು ರಕ್ಷಿಸಲು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ವಾಹನ ಸಂಚಾರ ನಡೆಯುವುದು ಉದ್ದೇಶವನ್ನೇ ಹಾಳು ಮಾಡುತ್ತದೆ ಎಂದು ಹೇಳಿದರು.
ಪಾದಚಾರಿ ಮಾರ್ಗಗಳಲ್ಲಿ ವಾಹನ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಪಘಾತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆಯನ್ನು ಅವರು ಎತ್ತಿದರು. ಉಲ್ಲಂಘನೆ ಮಾಡುವವರ ವಿರುದ್ಧ ಸಂಚಾರಿ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಪರ್ಯಾಯ ಅಥವಾ ಏಕಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ಮಾಡುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದರೆ ಸಂಚಾರ ಸುಗಮಗೊಳ್ಳಲಿದೆ ಎಂದು ಹೇಳಿದರು.
ಸಂಚಾರ ನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.
ಸಿಗ್ನಲ್ಗಳ ಸಮೀಪ ಬಸ್ ಸೇರಿದಂತೆ ಯಾವುದೇ ವಾಹನಗಳನ್ನು ಅನಗತ್ಯವಾಗಿ ನಿಲ್ಲಿಸಬಾರದು ಎಂದು ಸೂಚಿಸಿದ ಅವರು, ಸಿಗ್ನಲ್ನಿಂದ 75 ಮೀಟರ್ ಮತ್ತು ಜಂಕ್ಷನ್ನಿಂದ 50 ಮೀಟರ್ ವ್ಯಾಪ್ತಿಯಲ್ಲಿ ಇರುವ ಬಸ್ ನಿಲ್ದಾಣಗಳನ್ನು ಅಗತ್ಯವಿದ್ದರೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.