ಬೆಂಗಳೂರು:
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಸ್ವಾಗತಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಮರಾಠ ಪರಿಷತ್, ಮರಾಠ ಜನಾಂಗವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿ, ಇತ್ಯಾದಿಗಳಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ, ಈ ಪ್ರಾಧಿಕಾರಕ್ಕೆ 50 ಕೋಟಿ ರೂ. ಗಳ ಅನುದಾನಕ್ಕೆ ಆರ್ಥಿಕ ಇಲಾಖೆಗೆ ಮೀಸಲಿಡುವಂತೆ ಆದೇಶಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅಭಿನಂದಿಸಿದೆ.
ಬೇಡಿಕೆ ಈಡೇರಿಸಲು ಪ್ರಯತ್ನಿಸಿದ ಸಚಿವರಾದ ಬಿ. ಶ್ರೀರಾಮುಲು, ಶ್ರೀಮಂತ ಪಾಟೀಲ್ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪರಿಷತ್ ಅಧ್ಯಕ್ಷ ಸುರೇಶ್ ರಾವ್ ಸಾಠೆ, ಆಡಳಿತ ಮಂಡಳಿ ಸದಸ್ಯರು ಧನ್ಯವಾದ ಸಲ್ಲಿಸಿದ್ದಾರೆ.