ಬೆಂಗಳೂರು: ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಾಮಾನ್ಯ ಲಾಭಾಂಶ 68.69 ಕೋಟಿ ರೂ. ಮತ್ತು ವಿಶೇಷ ಲಾಭಾಂಶ 17,21,56,839 ಕೋಟಿ ರೂ. ಮೊತ್ತದ ಚೆಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂಪಾಯಿ ಮೊತ್ತದ ಚೆಕ್ ಸಹ ನೀಡಲಾಯಿತು.
ಚೆಕ್ ಸ್ವೀಕರಿಸಿದ ಸಿದ್ದರಾಮಯ್ಯ ಮಾತನಾಡಿ, ಸಾರ್ವಜನಿಕ ವಲಯದ ಉದ್ಯಮಗಳು ಲಾಭದಾಯಕವಾಗಿ ನಡೆಯುವುದು ಒಳ್ಳೆಯ ಬೆಳವಣಿಗೆಯಾಗಿದೆ. ಲಾಭಾಂಶದ ಹಂಚಿಕೆಯು ಸರಕಾರದ ಕೈಗಾರಿಕಾ ನಿಯಮಗಳಿಗೆ ತಕ್ಕಂತೆ ಇದ್ದು, ಇದರಿಂದ ರಚನಾತ್ಮಕ ಉಪಕ್ರಮಗಳನ್ನು ಕೈಗೊಳ್ಳಲು ಬಲ ಬರುತ್ತದೆ ಎಂದು ಮೆಚ್ಚುಗೆ ಸೂಸಿದರು.
ಕಳೆದ ಎರಡು ವರ್ಷಗಳಲ್ಲಿ ಕೆಎಸ್ಡಿಎಲ್, ಎಂಎಸ್ಐಎಲ್ ಸೇರಿದಂತೆ ಹಲವು ಉದ್ಯಮಗಳು ಉತ್ಪಾದನೆ, ವಹಿವಾಟು ಮತ್ತು ಲಾಭದಲ್ಲಿ ಸಾರ್ವಕಾಲಿಕ ದಾಖಲೆ ಮಾಡಿವೆ. ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತಂದಿದ್ದು, ರಫ್ತಿಗೆ ಉತ್ತೇಜನ ನೀಡಲಾಗಿದೆ ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್, ಸರಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.