ಬೆಂಗಳೂರು;- ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ.
ಮಳೆ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು.
ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ.
ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
The post Kumaraswamy; ತಮಿಳುನಾಡಿಗೆ ಮತ್ತೆ 3 ಕ್ಯೂಸೆಕ್ ನೀರು, ಇದೊಂದು ದೊಡ್ಡ ಆಘಾತ ಎಂದ HDK appeared first on Ain Live News.
