ಬೆಂಗಳೂರು;- ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ.. ಗ್ಯಾರಂಟಿ. ಇದು ಸತ್ಯ ಎಂದು ಹೇಳಿದ್ದಾರೆ.
ಕಾವೇರಿ ಬಗ್ಗೆ ಸರಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು ಎಂದು ಹೇಳಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತದೆ ರಾಜ್ಯ ಸರಕಾರ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ.
ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರಕಾರ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
The post Kumaraswamy; ಡಿಸೆಂಬರ್ ನಲ್ಲಿ ಕರ್ನಾಟಕ ಕತ್ತಲೆಭಾಗ್ಯದ ಕೂಪಕ್ಕೆ ಬೀಳಲಿದೆ – HDK appeared first on Ain Live News.
