ಬೆಂಗಳೂರು
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ಘೋಷಣೆಯಿಂದ ಕನ್ನಡ ಪರ ಸಂಘಟನೆಯ ಆಕ್ರೋಶಕ್ಕೆ ತುತ್ತಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಇಂದು ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ನಿಗಮವನ್ನು ಸ್ಥಾಪನೆ ಮಾಡಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಮರಾಠ ಅಭಿವೃದ್ಧಿ ನಿಮಗ ಸ್ಥಾಪನೆ ಘೋಷನೆಯ ನಂತರ ವೀರಶೈವ ಲಿಂಗಾಯತ ನಾಯಕರು ಕೂಡ ಮುಖ್ಯಮಂತ್ರಿಗೆ ಪತ್ರ ಬರೆದು ಲಿಂಗಾಯತರ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಬಸವರಾಜ ಹೊರಟ್ಟಿ ಸೇರಿ ಹಲವು ನಾಯಕರು ಈ ಒತ್ತಾಯ ಮಾಡಿದ್ದರು.