ಬೆಂಗಳೂರು: ಬೆಂಗಳೂರು ನಗರ ಪೊಲೀಸ್‍ನ ಮಾದಕ ವಸ್ತು ನಿಗ್ರಹ ದಳ, ಸಿಸಿಬಿ ತಂಡವು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬೊಮ್ಮನಹಳ್ಳಿಯಲ್ಲಿ 2.02 ಕೋಟಿ ರೂ.ಮೌಲ್ಯದ 2.024ಕೆಜಿ ಡ್ರಗ್ಸ್(ಎಂ.ಡಿ.ಎಂ.ಎ ಕ್ರಿಸ್ಟಲ್ಸ್) ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆದಾಯ ತೆರಿಗೆ ಇಲಾಖೆಯವರು 4.03 ಕೋಟಿ ರೂ.ನಗದು ಹಾಗೂ ಅಬಕಾರಿ ಇಲಾಖೆಯವರು ಉತ್ತರ ಕನ್ನಡ ಜಿಲ್ಲೆಯಲ್ಲಿ 82.65 ಲಕ್ಷ ರೂ.ಮೌಲ್ಯದ 37031.33 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 1,290 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ.
ಅಬಕಾರಿ ಇಲಾಖೆಯು ಘೋರ ಅಪರಾಧ ಅಡಿಯಲ್ಲಿ 1,427 ಪ್ರಕರಣಗಳನ್ನು ದಾಖಲಿಸಿದೆ. ಪರವಾನಗಿ ಉಲ್ಲಂಘನೆ ಅಡಿಯಲ್ಲಿ 1,469 ಪ್ರಕರಣ ದಾಖಲಿಸಿದೆ. ಎನ್‍ಡಿಪಿಎಸ್ ಅಡಿಯಲ್ಲಿ 95 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಅಡಿ 6,454 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 855 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಾಮಪತ್ರ ಸಲ್ಲಿಕೆ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ 358 ಅಭ್ಯರ್ಥಿಗಳು 492 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದರು. ಈ ಪೈಕಿ 384 ನಾಮಪತ್ರಗಳು ಸ್ವೀಕೃತವಾಗಿವೆ. 60 ನಾಮಪತ್ರಗಳು ತಿರಸ್ಕೃತಗೊಂಡಿವೆ. ಎ.8ರವರೆಗೆ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿದ್ದು, ಆನಂತರವಷ್ಟೇ ಅಂತಿಮವಾಗಿ ಎಷ್ಟು ಜನ ಅಭ್ಯರ್ಥಿಗಳು ಕಣದಲ್ಲಿ ಇರಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ.