ಮೈಸೂರು: CM ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಜಿಟಿ ದೇವೇಗೌಡ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸಿಎಂ ತವರಾದ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸೋಲುಂಡಿದ್ದರು. ಇದೀಗ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲೂ ಕಾಂಗ್ರೆಸ್ಗೆ ಮುಖಭಂಗವಾಗಿದೆ. ಈ ಹಿನ್ನಲೆ ಲೋಕಸಭಾ ಹಾಗೂ ಶಿಕ್ಷಕರ ಕ್ಷೇತ್ರದ ಸೋಲಿನ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರು ವಾಗ್ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹೆಚ್ಚು ಸ್ಥಾನ ಗೆದ್ದಿದೆ. ಸಿದ್ದರಾಮಯ್ಯ ತವರು, ಡಿಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿದ್ದರು. ಆದರೆ, ಮತದಾರರು ಗ್ಯಾರಂಟಿ ವಿರುದ್ಧ ಮತ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ, ಮೈತ್ರಿಯನ್ನು ಜನ ಒಪ್ಪಿದ್ದಾರೆ. ಪ್ರಧಾನಮಂತ್ರಿ ಮೋದಿ ರಾಜೀನಾಮೆ ಕೇಳುವ ಸಿಎಂ ಸಿದ್ದರಾಮಯ್ಯ ಅವರೇ ಸ್ವಕ್ಷೇತ್ರದ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದು ಕಿಡಿಕಾರಿದರು.