ಧಾರವಾಡ: ಧಾರವಾಡ ಜಿಲ್ಲೆಯ ಅನ್ನಿಗೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ ಮೇಲೆ ಸಂಭವಿಸಿದ ಭೀಕರ ದುರಂತದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಪಿ. ಸಲಿಮಠ್ ಕಾರಿನಲ್ಲೇ ಸುಟ್ಟು ಮೃತಪಟ್ಟಿದ್ದಾರೆ.
ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಸಲಿಮಠ್ ಪ್ರಯಾಣಿಸುತ್ತಿದ್ದ i20 ಕಾರು ರಾಷ್ಟ್ರೀಯ ಹೆದ್ದಾರಿಯ ಮಧ್ಯದ ಡಿವೈಡರ್ಗೆ ಡಿಕ್ಕಿ ಹೊಡೆದ ತಕ್ಷಣವೇ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಭಾರೀ ಪ್ರಮಾಣದಲ್ಲಿ ವ್ಯಾಪಿಸಿ, ಇನ್ಸ್ಪೆಕ್ಟರ್ ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರೂ, ಕಾರು ಕೆಲವು ನಿಮಿಷಗಳಲ್ಲಿ ಸಂಪೂರ್ಣ ಭಸ್ಮವಾಗಿದೆ.

ಹಾವೇರಿ ಲೋಕಾಯುಕ್ತ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಲಿಮಠ್ ಅವರು, ಘಟನೆ ಸಂಭವಿಸಿದ ಸಮಯದಲ್ಲಿ ಗದಗಕ್ಕೆ ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದರೆಂದು ತಿಳಿದುಬಂದಿದೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರೂ, ಅವರ ದೇಹ ಸಂಪೂರ್ಣವಾಗಿ ಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅನ್ನಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ.
ಯಾಂತ್ರಿಕ ದೋಷವೇ? ಅಥವಾ ಅತಿವೇಗವೇ? ಎಂಬ ಸಂಗತಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಹೆದ್ದಾರಿ ಸಿಸಿಟಿವಿ ದೃಶ್ಯಾವಳಿಗಳನ್ನೂ ಸಂಗ್ರಹಿಸಲಾಗುತ್ತಿದೆ.
