ಬೆಂಗಳೂರು:
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನೆ 123(1) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್, ಪ್ರಕರಣದ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.
ಕಾಂಗ್ರೆಸ್ 5 ಗ್ಯಾರಂಟಿ ಕಾರ್ಡ್‌ಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿದೆ. ಅಲ್ಲದೇ ಗ್ಯಾರಂಟಿ ಕಾರ್ಡ್‌ಗಳಲ್ಲಿ ಸಿದ್ದರಾಮಯ್ಯ ಅವರ ಸಹಿ ಇದೆ. ಆದ್ದರಿಂದ ಅವರ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಎಂದು ಮನವಿ ಮಾಡಲಾಗಿದೆ.