ಚಿಕ್ಕಮಗಳೂರು: ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಸಮಗ್ರ ಅಭಿವೃದ್ಧಿ, ಮಕ್ಕಳ ದಾಖಲಾತಿ ಹೆಚ್ಚಳ ಮತ್ತು ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಶನಿವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ಇಲಾಖೆಯ ಪ್ರಮುಖ ಉಪಕ್ರಮವಾದ ‘ನಮ್ಮ ಶಾಲೆ – ನಮ್ಮ ಜವಾಬ್ದಾರಿ’ ಯೋಜನೆಯಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಹಳೆ ವಿದ್ಯಾರ್ಥಿಗಳ ಸಹಕಾರದೊಂದಿಗೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕು. ಶಾಲೆಗಳ ಉನ್ನತೀಕರಣಕ್ಕೆ ಕೊಡುಗೆ ನೀಡುವ ದಾನಿಗಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಇತರರಿಗೂ ಪ್ರೇರಣೆ ನೀಡಬೇಕು ಎಂದು ಸಚಿವರು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವುದು, ಪೂರ್ವ ಪ್ರಾಥಮಿಕ ವಿಭಾಗಗಳನ್ನು ಆರಂಭಿಸುವುದು, ಅಗತ್ಯ ಮೂಲಸೌಕರ್ಯ ಕಲ್ಪಿಸುವುದು, ಶಿಕ್ಷಕರಿಗೆ ಕಾಲಕಾಲಕ್ಕೆ ತರಬೇತಿ ನೀಡುವುದು ಹಾಗೂ ಶಾಲೆಗೆ ಗೈರುಹಾಜರಾಗುವ ಮಕ್ಕಳನ್ನು ಮರಳಿ ಕರೆತರುವ ನಿಟ್ಟಿನಲ್ಲಿ ವಿಶೇಷ ಗಮನಹರಿಸಬೇಕು. ಅಗತ್ಯವಿರುವ ಕಡೆ ಆಂಗ್ಲ ಮಾಧ್ಯಮ ವಿಭಾಗಗಳನ್ನು ಆರಂಭಿಸುವುದು ಮತ್ತು ಆಯ್ದ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಶಿಕ್ಷಕರ ಕೊರತೆ ನೀಗಿಸಲು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವುದರ ಜತೆಗೆ, ಅಗತ್ಯವಿರುವ ಕಡೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು. ಶಾಲಾ ಕೊಠಡಿಗಳ ದುರಸ್ತಿ, ಶೌಚಾಲಯ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದರು.
ಶಾಲಾ ಪ್ರಾರಂಭದ ವೇಳೆಯಲ್ಲಿಯೇ ಎಲ್ಲ ಮಕ್ಕಳಿಗೂ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್ಗಳನ್ನು ಏಕಕಾಲದಲ್ಲಿ ವಿತರಿಸಬೇಕು. ಯಾವುದೇ ಮಗು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಪಿಎಂಶ್ರೀ ಶಾಲೆಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಗುಣಮಟ್ಟದ ಆಹಾರ ಪೂರೈಕೆ ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮಕ್ಕಳಲ್ಲಿ ಉತ್ತಮ ನಡತೆ ಮತ್ತು ಜೀವನ ಮೌಲ್ಯಗಳನ್ನು ಬೆಳೆಸಲು ಮೌಲ್ಯಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಬೇಕು. ಪೋಷಕರು ಮತ್ತು ಶಿಕ್ಷಕರ ಸಭೆಗಳನ್ನು ನಿಯಮಿತವಾಗಿ ನಡೆಸಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ವಿಶೇಷ ತರಬೇತಿ ನೀಡಬೇಕು ಎಂದು ಹೇಳಿದರು.
ಸಿಇಟಿ, ನೀಟ್ ಹಾಗೂ ಜೆಇಇ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಸೂಕ್ತ ತರಬೇತಿ ವ್ಯವಸ್ಥೆ ರೂಪಿಸಬೇಕು ಎಂದೂ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಗಾಯತ್ರಿ ಶಾಂತೇಗೌಡ, ಎಸ್.ಎಲ್. ಭೋಜೇಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಸಿ. ಶಿವಾನಂದ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್, ಜಿಲ್ಲಾ ಪಂಚಾಯಿತಿ ಸಿಇಒ ಮೀನಾಕ್ಷಿ ಆರ್ಯ, ಭದ್ರಾ ಕಾಡಾ ಅಧ್ಯಕ್ಷ ಕೆ.ಪಿ. ಅಂಶುಮಂತ್, ಡಿಡಿಪಿಐ ತಿಮ್ಮರಾಜು, ಡಿಡಿಪಿಯು ಮಂಜುಳಾ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ 2027ರಿಂದ ರಾಜ್ಯಮಟ್ಟದಲ್ಲಿ ಪ್ರಶ್ನೆ ಪತ್ರಿಕೆ: ಕೆಎಸ್ಇಎಬಿಗೆ ಹೊಣೆ
