ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಭೇಟಿಯಾದ ಸಂದರ್ಭ. ಚಿತ್ರ: ಲಭ್ಯವಾದದ್ದು
ಬೆಂಗಳೂರು: ಶಾಲಾ ಮಕ್ಕಳ ಮುಂದೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಆಡಿದ ಮಾತುಗಳ ಕುರಿತು ವರದಿ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ವರದಿಯ ಆಧಾರದ ಮೇಲೆ, ದೂರುಗಳಿಗಾಗಿ ಕಾಯದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸೋಮವಾರ ತಿಳಿಸಿದರು.
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿ ದ್ವೇಷದ ಭಾಷಣ ಮಾಡಿದ್ದರು ಎಂದು ಹೇಳಿದರು.
“ರಾಜಕಾರಣವನ್ನು ರಾಜಕೀಯ ವೇದಿಕೆಗಳಿಗೆ ಸೀಮಿತಗೊಳಿಸಬೇಕು. ಶಾಲೆಗಳಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ. ಅವರ ಮನಸ್ಸಿನಲ್ಲಿ ವಿಷವಿದ್ದರೆ ಅದನ್ನೇ ಹೊರಹಾಕುತ್ತಾರೆ. ಈ ವಿಚಾರವನ್ನು ನಾವು ಸುಮ್ಮನೆ ಬಿಡುವುದಿಲ್ಲ. ಶಾಸಕರು ಏನು ಮಾತನಾಡಿದ್ದಾರೆ ಎಂಬ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ವರದಿಯ ಆಧಾರದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ದೂರು ನೀಡಲು ಮುಂದೆ ಬಂದರೂ ಸ್ವಾಗತಿಸುತ್ತೇವೆ. ಆದರೆ, ದೂರುಗಳಿಗಾಗಿ ಕಾಯದೆ ಇಲಾಖೆಯಿಂದಲೇ ಕ್ರಮ ಕೈಗೊಳ್ಳುತ್ತೇವೆ” ಎಂದರು.
‘ಶಾಲೆಗಳು ದೇವಸ್ಥಾನಗಳಿದ್ದಂತೆ’
“ಶಾಲೆಗಳು ದೇವಸ್ಥಾನಗಳಿದ್ದಂತೆ. ಅಂತಹ ಪವಿತ್ರ ಸ್ಥಳದಲ್ಲಿ ರಾಜಕೀಯ ಮಾತನಾಡುವ ಅಗತ್ಯವೇನಿತ್ತು?” ಎಂದು ಪ್ರಶ್ನಿಸಿದ ಸಚಿವರು, ರಾಜಕಾರಣಕ್ಕಾಗಿ ಈಗಾಗಲೇ ದೇವಸ್ಥಾನಗಳನ್ನು ಬಳಸಿಕೊಂಡಿರುವವರು ಇದೀಗ ಶಾಲೆಗಳಿಗೂ ನೇರವಾಗಿ ಪ್ರವೇಶಿಸುತ್ತಿದ್ದಾರೆ ಎಂದರು. “ಶಿಕ್ಷಣ ಸಚಿವನಾಗಿ ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರು ಕ್ಷಮೆ ಕೇಳುತ್ತಾರೋ ಇಲ್ಲವೋ ಎಂಬುದು ಮುಖ್ಯವಲ್ಲ. ಕಾನೂನು ಪ್ರಕಾರ ಕೈಗೊಳ್ಳಬೇಕಾದ ಕ್ರಮವನ್ನು ಖಂಡಿತ ಕೈಗೊಳ್ಳುತ್ತೇವೆ” ಎಂದು ಎಚ್ಚರಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿ ಜಾರಿಗೆ ತಂದಿದ್ದ ದ್ವೇಷಪೂರಿತ ಪಠ್ಯಗಳನ್ನು ತೆಗೆದುಹಾಕುವುದಾಗಿ ಭರವಸೆ ನೀಡಿತ್ತು; ಪಠ್ಯಪುಸ್ತಕ ಪರಿಷ್ಕರಣೆ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸ ಮಾಡಲಾಗಿದೆ ಎಂದು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ
ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ತನ್ನಿಂದ ಸಾಧ್ಯವಾದ ಎಲ್ಲ ಸಹಕಾರವನ್ನೂ ನೀಡುತ್ತಿದೆ; ಉಡಾನ್ ಯೋಜನೆ ಕೇಂದ್ರ ಸರ್ಕಾರದ್ದಾಗಿದ್ದು, ಈ ಬಗ್ಗೆ ಕೇಂದ್ರದೊಂದಿಗೆ ಮಾತನಾಡಬೇಕಿದೆ ಎಂದರು.
ಸುಮಾರು 200 ಕೋಟಿ ರೂ. ಯೋಜನೆ ಎಂದು ಆರಂಭವಾದ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ ಅಂತಿಮವಾಗಿ 600 ಕೋಟಿ ರೂ.ವರೆಗೂ ವೆಚ್ಚವಾಗಿದೆ. ರಾಜ್ಯ ಸರ್ಕಾರದ ಶ್ರಮ ಮತ್ತು ಹಣದಲ್ಲಿ ಯೋಜನೆ ರೂಪಿಸಿ, ನಂತರ ಅದನ್ನು ಮುಚ್ಚುವ ಹಂತಕ್ಕೆ ತಂದು ಅಂಬಾನಿ, ಅದಾನಿ ಅವರಂಥ ಖಾಸಗಿ ಉದ್ಯಮಿಗಳಿಗೆ ಮಾರಾಟ ಮಾಡುವ ಉದ್ದೇಶ ಬಿಜೆಪಿಯದ್ದಾಗಿದೆ ಎಂದು ಅವರು ಆರೋಪಿಸಿದರು.
ಈ ಸಂಬಂಧ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೂ ಚರ್ಚಿಸಿದ್ದೇನೆ. “ಯಾವುದೇ ಕಾರಣಕ್ಕೂ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಖಾಸಗೀಕರಣಕ್ಕೆ ಬಿಟ್ಟುಕೊಡುವುದಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯುತ್ತೇವೆ” ಎಂದು ತಿಳಿಸಿದರು. ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಿದ ಬಳಿಕ ಹಲವು ತಿಂಗಳು ವಿಮಾನ ಹಾರಾಟವೇ ಇರಲಿಲ್ಲ; ರಾಜ್ಯ ಸರ್ಕಾರವೇ ಪ್ರಯತ್ನಪಟ್ಟು ವಿಮಾನ ಸಂಚಾರ ಆರಂಭಿಸಲು ಶ್ರಮಿಸಿತು ಎಂದು ಹೇಳಿದರು.
ಫೋನ್ ಕದ್ದಾಲಿಕೆ ಮತ್ತು ‘ದ್ವೇಷದ ರಾಜಕಾರಣ’
ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಐಟಿ ಮತ್ತು ಇ.ಡಿ. ಸಂಸ್ಥೆಗಳನ್ನು ಬಳಸಿಕೊಂಡು ಎಷ್ಟು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸಲಾಗಿದೆ, ಬಿಜೆಪಿ ನಾಯಕರ ವಿರುದ್ಧ ಎಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಹಾಳು ಮಾಡುತ್ತಿರುವಷ್ಟು ಬೇರೆ ಯಾರೂ ಮಾಡಿಲ್ಲ; ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
ಸೊರಬ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಬಂಗಾರಪ್ಪ ಅವರು ಪರಮೇಶ್ವರ್ ಅವರನ್ನು ಭೇಟಿಯಾಗಿದ್ದರು ಎಂದು ಪ್ರಕಟಣೆ ತಿಳಿಸಿದೆ.
