ಮಡಿಕೇರಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಶಾಸಕರಾದ ಡಾ.ಮಂತರ್ ಗೌಡ ಅವರು ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ವೀಕ್ಷಿಸಿದರು.
ಕುಶಾಲನಗರ ತಾಲ್ಲೂಕಿನ ಹಾರಂಗಿ ಬಳಿಯ ಅತ್ತೂರು ಗ್ರಾಮಕ್ಕೆ ತೆರಳಿ, ಅಲ್ಲಿನ ಮನೆ ಹಾನಿ ವೀಕ್ಷಿಸಿದ ಸಚಿವರು, ಸಂತ್ರಸ್ತ ಕುಟುಂಬದವರಿಗೆ ಧೈರ್ಯ ತುಂಬಿದರು.
ಸರ್ಕಾರ ಅಗತ್ಯ ಪರಿಹಾರ ನೀಡುವುದರ ಜೊತೆಗೆ ಸೂಕ್ತ ಸ್ಥಳದಲ್ಲಿ ಮನೆ ನಿರ್ಮಿಸಿಕೊಡಲಿದೆ. ಯಾರೂ ಸಹ ಆತಂಕಕ್ಕೆ ತುತ್ತಾಗಬಾರದು. ಸದ್ಯ ಪರಿಹಾರ ಕೇಂದ್ರದಲ್ಲಿ ವಾಸ್ತವ್ಯ ಹೂಡುವಂತಾಗಬೇಕು ಎಂದು ಕಂದಾಯ ಸಚಿವರು ಮನವಿ ಮಾಡಿದರು.
ಬಳಿಕ ವಾಲ್ನೂರು ತ್ಯಾಗತ್ತೂರು ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.
ಜುಲೈನಲ್ಲಿ ಹೆಚ್ಚಿನ ಮಳೆಯಾಗಿರುವುದರಿಂದ ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಮತ್ತು ಭೂಕುಸಿತ ಪ್ರದೇಶದ ಜನರು ಕಾಳಜಿ ಕೇಂದ್ರಕ್ಕೆ ಸ್ಥಳಾಂತರವಾಗುವುದು ಅತೀ ಮುಖ್ಯವಾಗಿದೆ. ಜೀವ ಉಳಿಸಿಕೊಂಡಲ್ಲಿ ಮುಂದೆ ಏನಾದರೂ ಸಾಧನೆ ಮಾಡಬಹುದು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮುನ್ನೆಚ್ಚರವಹಿಸಬೇಕು ಎಂದು ಸಚಿವರು ಹೇಳಿದರು.
ಸಂತ್ರಸ್ತರು ಆರೋಗ್ಯದ ಕಡೆ ಗಮನಹರಿಸಬೇಕು. ಕಾಳಜಿ ಕೇಂದ್ರದಲ್ಲಿ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಸಮಸ್ಯೆಗಳಿದ್ದಲ್ಲಿ ತಹಶೀಲ್ದಾರರು ಅಥವಾ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಸರ್ಕಾರ ಸಂತ್ರಸ್ತರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲಿದ್ದು, ಯಾರೂ ಸಹ ಆತಂಕಕ್ಕೆ ತುತ್ತಾಗಬಾರದು. ನಿಮ್ಮ ನೆರವಿಗೆ ಸರ್ಕಾರ ಸದಾ ಸಿದ್ಧವಿದೆ. ಆ ನಿಟ್ಟಿನಲ್ಲಿ ಧೈರ್ಯದಿಂದ ಬದುಕು ಕಟ್ಟಿಕೊಳ್ಳುವತ್ತ ಮುನ್ನಡೆಯಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತಹಶೀಲ್ದಾರ್ ಕಿರಣ್ ಗೌರಯ್ಯ ಸೇರಿದಂತೆ ಇತರರು ಇದ್ದರು.