ಬೆಂಗಳೂರು: ಸಚಿವ ನಾಗೇಂದ್ರ ಅವರು, ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ರಾಜೀನಾಮೆ ಪತ್ರ ಸಲ್ಲಿಸಿದರು. ಇದರೊಂದಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಕೆಟ್ ಪತನವಾದಂತಾಗಿದೆ.
ನಾಗೇಂದ್ರ ಅವರು ಡಿಕೆ ಶಿವಕುಮಾರ್ ಜೊತೆಗೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಿದರು. ಈ ವೇಳೆ ಸಚಿವ ಜಮೀರ್ ಅಹಮದ್ ಖಾನ್ ಸಹ ಉಪಸ್ಥಿತರಿದ್ದರು. ಇನ್ನು ನಾಗೇಂದ್ರ ಅವರು ರಾಜೀನಾಮೆ ಪತ್ರದಲ್ಲಿ ಒಂದೇ ಸಾಲು ಬರೆದಿರುವುದು ಕಂಡುಬಂದಿದ್ದು, ನನ್ನ ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬರೆದಿದ್ದಾರೆ.
ರಾಜೀನಾಮೆಗೂ ಮುನ್ನ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಾಗೇಂದ್ರ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ಇದಕ್ಕಾಗಿ ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ, ನಾನು ನಿರ್ದೋಷಿ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದರು.