ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಬುಧವಾರ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಸಿ. ಪುಟ್ಟರಂಗಶೆಟ್ಟಿ ಭೇಟಿ ನೀಡಿದ ಸಂದರ್ಭ. ಚಿತ್ರ: ವಾರ್ತಾ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೋಗ ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಹಾಗೂ ರೋಗ ನಿಯಂತ್ರಣಕ್ಕೆ ಅಗತ್ಯವಿರುವ ಲಸಿಕೆ, ಔಷಧೋಪಚಾರ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಸಿ. ಪುಟ್ಟರಂಗಶೆಟ್ಟಿ ಬುಧವಾರ ಸೂಚಿಸಿದರು.
ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಭೇಟಿ ನೀಡಿದ ಸಚಿವರು, ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಯ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸಿದರು. ಈ ಸಂಸ್ಥೆ ರಾಜ್ಯದಲ್ಲಿ ಸ್ಥಾಪನೆಯಾದ ಮೊದಲ ಪ್ರಾಣಿ ಲಸಿಕಾ ಸಂಸ್ಥೆಯಾಗಿದ್ದು, ರಾಜ್ಯದಾದ್ಯಂತ ಜಾನುವಾರುಗಳಿಗೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಲಸಿಕೆಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಾನುವಾರುಗಳ ಆರೋಗ್ಯ ರಕ್ಷಣೆಗೆ ಯಾವುದೇ ನಿರ್ಲಕ್ಷ್ಯ ತೋರದೆ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಲಾಖೆಯ ಆಯುಕ್ತ ಲಿಂಗರಾಜು, ಸಂಸ್ಥೆಯ ನಿರ್ದೇಶಕ ರತ್ನಂ, ಸಚಿವರ ಆಪ್ತ ಕಾರ್ಯದರ್ಶಿ ರಾಜೀವ ಕೂಲೇರ್ ಸೇರಿದಂತೆ ಸಂಸ್ಥೆಯ ಅಧಿಕಾರಿಗಳು ಹಾಗೂ ಇಲಾಖೆಯ ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.
ನಗರದ ಹೆಬ್ಬಾಳದಲ್ಲಿರುವ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರ ಕಚೇರಿಗೂ ಸಚಿವ ಪುಟ್ಟರಂಗಶೆಟ್ಟಿ ದಿಢೀರ್ ಭೇಟಿ ನೀಡಿದರು. ಉಪ ನಿರ್ದೇಶಕರು ಸರಿಯಾದ ಸಮಯಕ್ಕೆ ಹಾಜರಾಗದ ಕಾರಣ ಉಪ ನಿರ್ದೇಶಕ ಪರಮೇಶ್ವರ ಕೆ.ಟಿ. ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ಇನ್ನು ಮುಂದೆ ಕಚೇರಿ ಸಿಬ್ಬಂದಿ ಸರಿಯಾದ ಸಮಯಕ್ಕೆ ಹಾಜರಾಗಿ ಸಾರ್ವಜನಿಕ ಸೇವೆ ಮಾಡಬೇಕು ಎಂದು ಸೂಚನೆ ನೀಡಿದರು.
