ಬೆಂಗಳೂರು:
ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದು, ಸೆಪ್ಟೆಂಬರ್ 11 ಅಥವಾ 12 ರಂದು ಆದೇಶ ಪ್ರಕಟಿಸುವ ಸಾಧ್ಯತೆ ಇದೆ.
ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಚುನಾವಣಾ ಅಕ್ರಮದ ಆಧಾರದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1 ರಂದು ಹೈಕೋರ್ಟ್ ತೀರ್ಪು ನೀಡಿದೆ.
ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದು, ಅವರು ಹೊಂದಿರುವ ಆಸ್ತಿಗಳ ನೈಜ ಮೌಲ್ಯವನ್ನು ಮರೆಮಾಚಲಾಗಿದೆ ಎಂದು ಆರೋಪಿಸಲಾಗಿದೆ.