ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವಂಬರ್ ಎರಡನೇ ವಾರಕ್ಕೆ ಮುಂದೂಡಿದೆ.
ಗುರುವಾರ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. 2024ರ ಸೆಪ್ಟೆಂಬರ್ 24ರಂದು ಏಕಸದಸ್ಯ ಪೀಠವು ರಾಜ್ಯಪಾಲರ ಕ್ರಮವನ್ನು ಮಾನ್ಯಗೊಳಿಸಿತ್ತು. ಇದರ ವಿರುದ್ಧ ಸಿಎಂ ಸಿದ್ದರಾಮಯ್ಯ ಹಾಗೂ ವಿವಾದಿತ ಜಮೀನಿನ ಮೂಲ ಮಾಲೀಕ ಜೆ. ದೇವರಾಜು ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದರು.
ನ್ಯಾಯಾಲಯದ ವಾದ ವಿವರಣೆ
ರಾಜ್ಯ ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಮೇಲ್ಮನವಿಗಳ ಅಂತಿಮ ವಿಚಾರಣೆ ನಡೆಸಬೇಕು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ನ್ಯಾಯಪೀಠವು ನವೆಂಬರ್ ಮೊದಲ ವಾರದಲ್ಲಿ ವಿಚಾರಣೆ ನಡೆಸಬಹುದೇ ಎಂದು ಕೇಳಿದಾಗ, ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠವು ವಿಚಾರಣೆಯನ್ನು ನವೆಂಬರ್ ಎರಡನೇ ವಾರಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ
ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ತನಿಖೆಗೆ ಅನುಮತಿ ನೀಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದರು. ಈ ಕ್ರಮವನ್ನು ಏಕಸದಸ್ಯ ಪೀಠ ಎತ್ತಿಹಿಡಿದಿತ್ತು.
ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದರು. ಇದೇ ಪ್ರಕರಣದಲ್ಲಿ ಸಂಬಂಧವಿಲ್ಲದಿದ್ದರೂ ತಮ್ಮನ್ನು ಅನವಶ್ಯಕವಾಗಿ ಎಳೆದು ತರುವುದು ಹಾಗೂ ಏಕಸದಸ್ಯ ಪೀಠದ ತೀರ್ಪಿನಲ್ಲಿ ಮಾಡಲಾದ ತೀಕ್ಷ್ಣ ಟಿಪ್ಪಣಿಗಳಿಂದ ಸಿವಿಲ್ ಹಾಗೂ ಕ್ರಿಮಿನಲ್ ಮೊಕದ್ದಮೆ ಎದುರಿಸಬೇಕಾಗಿದೆ ಎಂದು ಜೆ. ದೇವರಾಜು ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದಾರೆ.
ಹೈಕೋರ್ಟ್ ಈಗ ಎರಡೂ ಮೇಲ್ಮನವಿಗಳ ವಿಚಾರಣೆಯನ್ನು ನವಂಬರ್ ಎರಡನೇ ವಾರಕ್ಕೆ ಪಟ್ಟಿ ಮಾಡಿದೆ.