ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದ್ದ ಅಕ್ರಮಗಳ ಕುರಿತು ತನಿಖೆ ನಡೆಸಿದ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಆಯೋಗ ತನ್ನ ವರದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಕ್ಲೀನ್‌ಚಿಟ್ ನೀಡಿದೆ ಎಂದು ಕಾನೂನು ಮತ್ತು ಸಂಸತ್ತಿನ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಶುಕ್ರವಾರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಟೀಲ್, “ಮುಡಾದಲ್ಲಿ ನಡೆದ ಅಕ್ರಮಗಳ ಕುರಿತು ಸರಕಾರವು ದೇಸಾಯಿ ಆಯೋಗವನ್ನು ರಚಿಸಿತ್ತು. ಆಯೋಗವು ಸಮಗ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸಿದೆ. ವರದಿಯಲ್ಲಿ ಸಿಎಂ ಹಾಗೂ ಅವರ ಕುಟುಂಬದ ವಿರುದ್ಧ ಯಾವುದೇ ಆರೋಪಗಳಿಲ್ಲ. ಆದರೆ, ಕೆಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ. ಸಚಿವ ಸಂಪುಟವು ಆ ಶಿಫಾರಸುಗಳನ್ನು ಅಂಗೀಕರಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು” ಎಂದರು.
ಬಿಬಿಎಂಪಿ ಅವ್ಯವಹಾರ ಕುರಿತ ವರದಿ
ಇದೇ ವೇಳೆ, ಬಿಬಿಎಂಪಿ ಕಾಮಗಾರಿಗಳಲ್ಲಿ ನಡೆದ ಅವ್ಯವಹಾರ ಮತ್ತು ಭ್ರಷ್ಟಾಚಾರ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗ ಸಲ್ಲಿಸಿದ ವಿಚಾರಣಾ ವರದಿಯನ್ನು ಸಚಿವ ಸಂಪುಟ ಸ್ವೀಕರಿಸಿದೆ.
“ಆ ವರದಿ ಕುರಿತು ಇಂದು ನಡೆದ ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು,” ಎಂದು ಪಾಟೀಲ್ ತಿಳಿಸಿದರು.